ಕೋಲ್ಕತ್ತಾ(ಪಶ್ಚಿಮ ಬಂಗಾಳ):ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಮನೆಯಲ್ಲಿ ಬರೋಬ್ಬರಿ 20 ಕೋಟಿ ರೂಪಾಯಿ ನಗದು ಹಣ ಪತ್ತೆಯಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಪಶ್ಚಿಮ ಬಂಗಾಳದ ಶಾಲಾ ಸೇವಾ ಆಯೋಗ ಮತ್ತು ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯಲ್ಲಿನ ಅಕ್ರಮ ನೇಮಕಾತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಏಕಕಾಲದಲ್ಲಿ ವಿವಿಧ ಸ್ಥಳಗಳಲ್ಲಿ ಕಾರ್ಯಚರಣೆ ನಡೆಸಿದ್ದರು. ಈ ವೇಳೆ ಅರ್ಪಿತಾ ಮುಖರ್ಜಿ ಅವರ ವಸತಿ ಆವರಣದಲ್ಲಿ 20 ಕೋಟಿ ರೂಪಾಯಿ ಸಿಕ್ಕಿದೆ.
ಟಿಎಂಸಿ ಸಚಿವ ಪಾರ್ಥ ಚಟರ್ಜಿ ಅವರ ನಿಕಟವರ್ತಿಯಾಗಿರುವ ಅರ್ಪಿತಾ ಮುಖರ್ಜಿ ಹಗರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಅರ್ಪಿತಾ ಮುಖರ್ಜಿ ಬಳಿ ಒಟ್ಟು 20 ಕ್ಕೂ ಹೆಚ್ಚು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದ್ದು, ತಪಾಸಣೆ ಮುಂದುವರೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಮತ್ತು ಟಿಎಂಸಿ ನಾಯಕ ಪಾರ್ಥ ಚಟರ್ಜಿ ಅವರ ಸಹ ಸಂಸ್ಥೆಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಜೊತೆಗೆ ಶಿಕ್ಷಣ ಸಚಿವ ಪರೇಶ್ ಅಧಿಕಾರಿ ಅವರ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ. ಎಸ್‌ಎಸ್‌ಸಿ ನೇಮಕಾತಿ ಹಗರಣ ಪ್ರಕರಣದಲ್ಲಿ ಇಬ್ಬರೂ ಸಚಿವರನ್ನು ಸಿಬಿಐ ಈಗಾಗಲೇ ವಿಚರಾಣೆಗೊಳಪಡಿಸಿದೆ.