ನವದೆಹಲಿ:ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದೆ. ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರ ಮಾಡಿರುವ ಸಾಧನೆಗಳನ್ನು ಜಾಹೀರಾತು ನೀಡಿರುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಚುನಾವಣಾ ಸಂದರ್ಭದಲ್ಲಿ ನೆರೆಯ ರಾಜ್ಯದಲ್ಲಿ ಜಾಹೀರಾತು ನೀಡುವುದು ಚುನಾವಣಾ ನಿಯಮಗಳ ಉಲ್ಲಂಘನೆಯಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.
ಈ ಸಂಬಂಧ ಮಂಗಳವಾರ ಸಂಜೆ 5 ಗಂಟೆಯೊಳಗೆ ವಿವರಣೆ ನೀಡುವಂತೆ ಕರ್ನಾಟಕ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ. ಪತ್ರದಲ್ಲಿ ಜಾಹೀರಾತುಗಳನ್ನು ನಿಲ್ಲಿಸುವಂತೆ ಆದೇಶಿಸಲಾಗಿದೆ. ಪ್ರಕಟಣೆ ಹೊರಡಿಸಿರುವ ಸಂಬಂಧ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ಪತ್ರದಲ್ಲಿ ತಿಳಿಸಲಾಗಿದೆ. ಚುನಾವಣಾ ಸಂದರ್ಭದಲ್ಲಿ ತೆಲಂಗಾಣದಲ್ಲಿ ಜಾಹೀರಾತು ನೀಡುವ ಕುರಿತು ಬಿಜೆಪಿ ಚುನಾವಣೆ ಆಯೋಗಕ್ಕೆ ದೂರು ನೀಡಿದ್ದಾರೆ.
ಬಿಜೆಪಿ ದೂರು:ಕಳೆದ ಕೆಲವು ದಿನಗಳಿಂದ ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದ ಜಾಹೀರಾತುಗಳು ಬರುತ್ತಿವೆ ಎಂದು ಬಿಜೆಪಿ ನಾಯಕರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಸ್ಥಳೀಯ ಮಾಧ್ಯಮಗಳಲ್ಲಿ ಕರ್ನಾಟಕ ಸರ್ಕಾರದ ಸಾಧನೆಗಳ ಜಾಹೀರಾತು ಪ್ರಸಾರವನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿ ಈ ಕುರಿತು ಕಾಂಗ್ರೆಸ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.