ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಅನರ್ಹತೆಯಿಂದಾಗಿ ತೆರವುಗೊಂಡಿರುವ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡಲು ಯಾವುದೇ ಆತುರವಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ. ಲೋಕಾಸಭಾ ಸದಸ್ಯತ್ವ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಅವರಿಗೆ ಮೇಲ್ಮನವಿ ಸಲ್ಲಿಸಲು ವಿಚಾರಣಾ ನ್ಯಾಯಾಲಯವು ಒಂದು ತಿಂಗಳ ಕಾಲಾವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಲು ಯಾವುದೇ ಆತುರ ಮಾಡುವುದಿಲ್ಲ ಎಂದು ಆಯೋಗ ಪ್ರತಿಕ್ರಿಯಿಸಿದೆ.
ಚುನಾವಣೆ ಸಂಬಂಧ ಕಳೆದ ಫೆಬ್ರವರಿ ತಿಂಗಳವರೆಗೆ ಉಂಟಾದ ಖಾಲಿ ಹುದ್ದೆಗಳವರೆಗೆ ಚುನಾವಣಾ ಸಮಿತಿಯು ನಿರ್ಧಾರಗಳನ್ನು ತೆಗೆದುಕೊಂಡಿತ್ತು. ಸೂರತ್‌ನ ಜಿಲ್ಲಾ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ 30 ದಿನಗಳ ಕಾಲಾವಕಾಶವನ್ನೂ ನೀಡಿದೆ. ಕಾಲಾವಕಾಶ ಮುಗಿದ ಬಳಿಕ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
"ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಸುವ ಬಗ್ಗೆ ಯಾವುದೇ ಆತುರವಿಲ್ಲ. ನಾವು ಕಾಯುತ್ತೇವೆ. ವಿಚಾರಣಾ ನ್ಯಾಯಾಲಯವು ನೀಡಿರುವ ಅವಧಿಯ ಮುಕ್ತಾಯದ ನಂತರ ನಾವು ಈ ಬಗ್ಗೆ ಮುಂದಿನ ಕ್ರಮಕೈಗೊಳ್ಳುತ್ತೇವೆ" ಎಂದು ಆಯುಕ್ತರು ಹೇಳಿದರು.
ಇನ್ನು, ಮಾರ್ಚ್ 23 ರಂದು ವಯನಾಡು ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯತ್ವ ಸ್ಥಾನವನ್ನು ತೆರವುಗೊಳಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಕಾನೂನಿನ ಪ್ರಕಾರ ಆರು ತಿಂಗಳೊಳಗೆ ಉಪಚುನಾವಣೆ ನಡೆಸಬೇಕಾಗುತ್ತದೆ. ಈ ಅವಧಿಯು ಒಂದು ವರ್ಷಕ್ಕಿಂತ ಕಡಿಮೆಯಿದ್ದರೆ ಚುನಾವಣೆ ನಡೆಸಬಾರದು ಎಂದು ಕಾನೂನು ಹೇಳುತ್ತದೆ. ಆದರೆ ಈ ಅವಧಿಯು ಒಂದು ವರ್ಷಕ್ಕಿಂತ ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.
ಏಪ್ರಿಲ್ 5ಕ್ಕೆ ಕರ್ನಾಟಕಕ್ಕೆ ರಾಹುಲ್: ರಾಹುಲ್ ಗಾಂಧಿಯವರು ಏಪ್ರಿಲ್ 5ಕ್ಕೆ ಕರ್ನಾಟಕದ ಕೋಲಾರಕ್ಕೆ ಆಗಮಿಸಲಿದ್ದಾರೆ. ಕೋಲಾರದಲ್ಲಿ ಕಾಂಗ್ರೆಸ್ ಹಮ್ಮಿಕೊಳ್ಳುವ ಬೃಹತ್ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಸೂರತ್ ಜಿಲ್ಲಾ ನ್ಯಾಯಾಲಯ ರಾಹುಲ್ ಗಾಂಧಿಯನ್ನು ದೋಷಿ ಎಂದು ತೀರ್ಪು ನೀಡಿತ್ತು. ಜೊತೆಗೆ ಎರಡು ವರ್ಷ ಶಿಕ್ಷೆಯನ್ನು ವಿಧಿಸಿತ್ತು. ಅಲ್ಲದೇ ವಯನಾಡು ಸಂಸತ್ ಸದಸ್ಯ ಸ್ಥಾನದಿಂದ ಅವರನ್ನು ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಇದನ್ನು ಖಂಡಿಸಿ ಕಾಂಗ್ರೆಸ್ ಅಂದು ಭಾಷಣ ಮಾಡಿದ ಸ್ಥಳದಲ್ಲೇ ಮತ್ತೆ ರಾಹುಲ್‌ರನ್ನು ಕರೆಸಿ ಬೃಹತ್ ಕಾರ್ಯಕ್ರಮ ನಡೆಸಲು ಕಾಂಗ್ರೆಸ್ ಯೋಜನೆ ರೂಪಿಸಿದೆ.
ಇದನ್ನೂ ಓದಿ :ಏಪ್ರಿಲ್ 5ರಂದು ಕರ್ನಾಟಕಕ್ಕೆ ಬರಲಿದ್ದಾರೆ ರಾಹುಲ್ ಗಾಂಧಿ