ಶ್ರೀನಗರ :ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ರಾಜ್‌ಪೊರಾ ಪ್ರದೇಶದ ಹಂಜಿನ್ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇನ್ನು, ಓರ್ವ ಉಗ್ರನನ್ನು ಸೇನೆ ಹೊಡೆದುರುಳಿಸಿದೆ. ಸದ್ಯ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿದೆ.
ಹುತಾತ್ಮ ಯೋಧನನ್ನು ಹವಾಲ್ದಾರ್ ಕಾಶಿ ಕುಮಾರ್ ಎಂದು ಗುರುತಿಸಲಾಗಿದೆ. ಇನ್ನು, ಹಂಜಿನ್ ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ಈ ವೇಳೆ ಸೇನೆ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರಿಗೆ, ಪಡೆ ತಕ್ಕ ಪ್ರತ್ಯುತ್ತರ ನೀಡಿದೆ.