ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್)ಯ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ. ಈ ಬಗ್ಗೆ ಕೇಂದ್ರ ಗೃಹ ಇಲಾಖೆ ಟ್ವೀಟ್ ಮಾಡಿದ್ದು, ಸಿಎಪಿಎಫ್ ಕಾನ್ಸ್‌ಟೇಬಲ್ (ಜಿಡಿ) ಪರೀಕ್ಷೆಗಳನ್ನು 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಇದು ನಿರ್ಧಾರವು ಪ್ರಾದೇಶಿಕ ಭಾಷೆಗಳನ್ನು ಅಭಿವೃದ್ಧಿಪಡಿಸಲು ಮತ್ತು ಪ್ರೋತ್ಸಾಹಿಸಲು ಪ್ರಧಾನಿ ಮೋದಿ ಅವರ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದೆ.
2024ರ ಜನವರಿ 1ರಿಂದ ಸಿಎಪಿಎಫ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು. ಪ್ರಶ್ನೆ ಪತ್ರಿಕೆಯು ಅಸ್ಸಾಮಿ, ಬಂಗಾಳಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಇರಲಿದೆ. ಆಕಾಂಕ್ಷಿಗಳು ತಮ್ಮ ಮಾತೃಭಾಷೆ ಮತ್ತು ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುತ್ತಾರೆ ಮತ್ತು ಅವರ ಆಯ್ಕೆಯ ಭವಿಷ್ಯವನ್ನು ಸುಧಾರಿಸುತ್ತಾರೆ ಎಂದು ಗೃಹ ಇಲಾಖೆ ಹೇಳಿದೆ.
ಸಿಎಪಿಎಫ್‌ನಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಗೆ ಉತ್ತೇಜನ ನೀಡಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಪ್ರೋತ್ಸಾಹಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಉಪಕ್ರಮದಲ್ಲಿ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕಾನ್ಸ್‌ಟೇಬಲ್ ಜಿಡಿ ದೇಶಾದ್ಯಂತ ಲಕ್ಷಾಂತರ ಅಭ್ಯರ್ಥಿಗಳನ್ನು ಆಕರ್ಷಿಸುವ ಸಿಬ್ಬಂದಿ ಆಯ್ಕೆ ಆಯೋಗವು ನಡೆಸುವ ಪ್ರಮುಖ ಪರೀಕ್ಷೆಗಳಲ್ಲಿ ಒಂದಾಗಿದೆ ಎಂದು ತಿಳಿಸಿದೆ.