ನವದೆಹಲಿ: ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಅನ್ನದಾತರ ಪ್ರತಿಭಟನೆ ಮುಂದುವರೆದಿದ್ದು, ಇಂದು 4 ಗಂಟೆಗಳ ಕಾಲ ರಾಷ್ಟ್ರವ್ಯಾಪಿ 'ರೈಲು ತಡೆ ಚಳವಳಿ'ಗೆ ರೈತ ಸಂಘಟನೆಗಳು ಕರೆ ನೀಡಿವೆ.
ಇಂದು ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆಯವರೆಗೆ ರೈತರು ರೈಲು ತಡೆದು ಶಾಂತಿಯುತ ಪ್ರತಿಭಟನೆ ನಡೆಸಲಿದ್ದಾರೆ. ಪ್ರಯಾಣಿಕರಿಗೆ ಸಮಸ್ಯೆಯಾಗದಂತೆ ಅವರಿಗೆ ಉಪಹಾರದ ವ್ಯವಸ್ಥೆಯನ್ನು ನಾವು ಮಾಡುತ್ತೇವೆ ಎಂದು ಕಿಸಾನ್ ಆಂದೋಲನ ಸಮಿತಿಯ ವಕ್ತಾರ ಜಗ್ತಾರ್ ಸಿಂಗ್ ಬಜ್ವಾ ಗಾಜಿಪುರ ಗಡಿಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದಲ್ಲೂ ರಾಜ್ಯ ಕಬ್ಬು ಬೆಳಗಾರರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈಲ್ ರೋಖೋ ಚಳವಳಿ ನಡೆಯಲಿದೆ.