ಸೋನಿಪತ್ (ಹರಿಯಾಣ) : ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತೆ ದೆಹಲಿ ಚಲೋ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಎಂಎಸ್ಪಿ ಗ್ಯಾರಂಟಿ ಕಾನೂನು ಜಾರಿ, ಸ್ವಾಮಿನಾಥನ್ ವರದಿ ಜಾರಿ ಮತ್ತು ಭೂ ಸ್ವಾಧೀನ ಕಾಯ್ದೆ- 2013 ಸೇರಿ ವಿವಿಧ ಯೋಜನೆಗಳನ್ನು ಜಾರಿ ಮಾಡುವಂತೆ ಒತ್ತಾಯಿಸಿ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಸಂಬಂಧ ಉತ್ತರಪ್ರದೇಶ, ಹರಿಯಾಣ, ಪಂಜಾಬ್ನ ರೈತರು ಫೆಬ್ರವರಿ 13ರಂದು ದೆಹಲಿ ಚಲೋ ಹಮ್ಮಿಕೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಯುವ ರೈತ ಮುಖಂಡ ಅಭಿಮನ್ಯು ಕೋಹರ್, ಕೇಂದ್ರ ಸರ್ಕಾರ ಈ ಹಿಂದೆ ಜಾರಿ ಮಾಡಿದ್ದ ಮೂರು ಕೃಷಿ ಕಾನೂನುಗಳನ್ನು ರೈತರ ಪ್ರತಿಭಟನೆ ನಡೆಸಿದ ಕಾರಣ ರದ್ದು ಮಾಡಿದೆ. ಇದರ ಜೊತೆಗೆ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ರೈತರು ಒತ್ತಾಯಿಸಿದ್ದರು. ಆದರೆ, ಕೇಂದ್ರ ಸರ್ಕಾರ ಈ ಬೇಡಿಕೆಗಳನ್ನು ಇದುವರೆಗೆ ಈಡೇರಿಸಿಲ್ಲ. ಈ ಸಂಬಂಧ ಫೆಬ್ರವರಿ 13ರಂದು ದೆಹಲಿ ಚಲೋ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.
ಈ ಹಿಂದೆ ಕೇಂದ್ರ ಸರ್ಕಾರವು ಮೂರು ಕೃಷಿ ಮಸೂದೆಗಳನ್ನು ಹಿಂಪಡೆದಿದೆ. ಇದರ ಜೊತೆಗೆ ನಾವು ಕೇಂದ್ರ ಸರ್ಕಾರದ ಮುಂದೆ ಹಲವು ಮಸೂದೆಗಳನ್ನು ಮತ್ತು ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿದ್ದೆವು. ಆದರೆ, ಸರ್ಕಾರ ನಮ್ಮ ಬೇಡಿಕೆಗಳನ್ನು ಬಾಕಿ ಉಳಿಸಿಕೊಂಡಿದ್ದು, ಇದರ ಅನುಷ್ಠಾನ ಮಾಡಿಲ್ಲ. ಈ ಮೂಲಕ ನಾನು ಸರ್ಕಾರಕ್ಕೆ ಒತ್ತಾಯಿಸುವುದೇನೆಂದರೆ, ಎಂಎಸ್ಪಿ ಕಾನೂನನ್ನು ಜಾರಿ ಮಾಡಬೇಕು ಎಂದರು.