ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹಲವು ತಿಂಗಳುಗಳಿಂದ ನಿರಂತರ ಪ್ರತಿಭಟನೆಗಳಲ್ಲಿ ಭಾಗಿಯಾಗಿರುವ ರೈತರು ಇದೀಗ ಇತ್ತೀಚೆಗೆ ನಡೆದ ಲಖೀಂಪುರ ಕೇರಿ ಪ್ರಕರಣದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಲಖೀಂಪುರ ಹಿಂಸಾಚಾರ ಪ್ರಕರಣದಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಮೃತಪಟ್ಟಿದ್ದರು. ಈ ಘಟನೆಯ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ತೇಣಿ ಅವರ ರಾಜೀನಾಮೆಗೆ ಒತ್ತಾಯಿಸಿ ವಿವಿಧ ರೈತ ಸಂಘಟನೆಗಳು ಇಂದು ರೈಲು ರೊಕೊಗೆ ಇಳಿದಿವೆ.
ಇವತ್ತು ಸಂಯುಕ್ತ ಕಿಸಾನ್ ಮೋರ್ಚಾ (SKM) 6 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ರೈಲು ರೊಕೊ ಚಳವಳಿಗೆ ಕರೆ ಕೊಟ್ಟಿದೆ. ಈ ಮೂಲಕ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇಣಿ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ತೆಗೆದುಹಾಕಲು ಒತ್ತಡತಂತ್ರವನ್ನು ತೀವ್ರಗೊಳಿಸುತ್ತಿದ್ದಾರೆ. ಉತ್ತರ ಪ್ರದೇಶದ ಲಖೀಂಪುರ ಪ್ರಕರಣದಲ್ಲಿ ಸಚಿವರ ಪುತ್ರನ ಮೇಲೆ ಗಂಭೀರ ಆರೋಪವಿದೆ.
ರೈಲ್ ರೊಕೊ ಹಿನ್ನೆಲೆಯಲ್ಲಿ ಭಾನುವಾರ ಪ್ರಕಟಣೆ ಹೊರಡಿಸಿದ ಸಂಯುಕ್ತ ಕಿಸಾನ್ ಮೋರ್ಚಾ, ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ತಕ್ಷಣ ತೆಗೆದು ಹಾಕಬೇಕು. ನಂತರ ಅವರನ್ನು ಬಂಧಿಸಿ ವಿಚಾರಣೆ ನಡೆಸಿ ಶಿಕ್ಷೆಗೆ ಗುರಿಪಡಿಸುವ ಮೂಲಕ ಲಖೀಂಪುರ ಖೇರಿ ಪ್ರಕರಣಕ್ಕೆ ನ್ಯಾಯ ಒದಗಿಸಬೇಕಿದೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ, ಇಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗಿನ ಆರು ಗಂಟೆಗಳ ಅವಧಿಯಲ್ಲಿ ರೈಲುಗಳನ್ನು ತಡೆದು ಪ್ರತಿಭಟಿಸುವಂತೆ ಕರೆ ಕೊಟ್ಟಿದೆ.