ಸೇಲಂ:ತಮಿಳುನಾಡಿನ ಸೇಲಂ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಇಂದು ನಡೆದಿದ್ದು, ಅಲ್ಲಿಯ ರೋಗಿಗಳನ್ನು ಕೂಡಲೇ ಬೇರೊಂದು ಆಸ್ಪತ್ರೆಗೆ ಸಾಗಿಸಲಾಗಿದೆ.
ಇಲ್ಲಿಯ ಮೋಹನ್ ಕುಮಾರಮಂಗಲಂ ಆಸ್ಪತ್ರೆಯಲ್ಲಿನ ಮೊದಲ ಮಹಡಿಯ ಆಪರೇಷನ್ ಕೊಠಡಿಯಲ್ಲಿನ ಎಸಿಯಲ್ಲಿ ತಾಂತ್ರಿಕ ಸಮಸ್ಯೆಯಿಂದ ಹಠಾತ್ ಆಗಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಯಿಂದ ಆಸ್ಪತ್ರೆಯಲ್ಲಿ ಹೊಗೆ ಆವರಿಸಿಕೊಂಡಿದೆ. ಬಳಿಕ ಸುತ್ತಲೂ ಇರುವ ವಾರ್ಡ್ಗಳಿಗೂ ಹೊಗೆ ಹರಡಲು ಪ್ರಾರಂಭಿಸಿತು. ಇದನ್ನು ಗಮನಿಸಿದ ಆಸ್ಪತ್ರೆಯ ಸಿಬ್ಬಂದಿ ಕೂಡಲೇ ಆಸ್ಪತ್ರೆಯ ತುರ್ತು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳನ್ನು ಬೇರೊಂದು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವಿನ ವರದಿಯಾಗಿಲ್ಲ.
ಈ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ನಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಘಟನೆ ಬಗ್ಗೆ ಆಸ್ಪತ್ರೆ ಪ್ರಾಂಶುಪಾಲ ಮಣಿ ಮಾತನಾಡಿ, ಅಪರೇಷನ್ ಥಿಯೇಟರ್ನಲ್ಲಿ ಬೆಂಕಿ ಅವಘಡ ಸಂಭವಿಸಿದ ಬಳಿಕ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ. ಇದಿರಂದ ತುರ್ತು ಚಿಕಿತ್ಸಾ ಘಟಕಕ್ಕೂ ವಿದ್ಯುತ್ ಪೂರೈಕೆ ನಿಂತು ಹೋಗಿದೆ. ತುರ್ತು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಳರೋಗಿಗಳನ್ನು ಬೇರೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಗ್ನಿ ಅವಘಡದಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆ ಬಳಿಕ ಹೊಗೆ ಆವರಿಸಿದ್ದು, ಇದರಿಂದ ಗಾಬರಿಗೊಂಡ ರೋಗಿಗಳು ಹೊರಬರಲು ದಾರಿ ಕಾಣದೇ ಪರದಾಡಿದರು. ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ಹೇಳಿದರು
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಕ್ಷಣ ಸೇಲಂ ಜಿಲ್ಲಾಧಿಕಾರಿ ಎಸ್.ಕಾರ್ಮೇಗಂ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ್ದಾರೆ. ತುರ್ತು ಘಟಕದ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ವ್ಯವಸ್ಥೆ ಮಾಡಲಾಗಿದೆ. ಅಪಘಾತದಲ್ಲಿ ತುರ್ತು ಚಿಕಿತ್ಸೆಗೆ ಬರುವ ರೋಗಿಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಕಳುಹಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಎಸಿಯಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದು ಬೆಂಕಿ ಹೊತ್ತಿಕೊಂಡಿದ್ದರಿಂದ ಆಸ್ಪತ್ರೆಯ ಮೊದಲ ಮಹಡಿ ಸಂಪೂರ್ಣ ಹೊಗೆಯಿಂದ ಆವರಿಸಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಇದನ್ನೂ ಓದಿ:ಖಾನಾಪುರ ಕೆನರಾ ಬ್ಯಾಂಕ್ಗೆ ಬೆಂಕಿ: ಕಡತ, ಪಿಠೋಪಕರಣಗಳು ಸುಟ್ಟು ಭಸ್ಮ