ನವದೆಹಲಿ: ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಪೈಕಿ ನಿನ್ನೆ ನಾಲ್ಕು ರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಸರ್ಕಾರ ರಚಿಸಲಿದೆ. ಹಾಗೆಯೇ, ತೆಲಂಗಾಣದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದೆ. ಇದೀಗ ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಅನೇಕರು ಕಾಂಗ್ರೆಸ್ ಸೋಲಿಗೆ ಹಲವು ಕಾರಣಗಳನ್ನು ನೀಡುತ್ತಿದ್ದಾರೆ. ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಕೂಡ ಕಾಂಗ್ರೆಸ್ ಸೋಲಿಗೆ ಕಾರಣವೊಂದನ್ನು ನೀಡಿದ್ದಾರೆ.
ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ವೆಂಕಟೇಶ್ ಪ್ರಸಾದ್, ಸನಾತನ ಧರ್ಮವನ್ನು ನಿಂದನೆ ಮಾಡಿದ ಪರಿಣಾಮ ಕಾಂಗ್ರೆಸ್ ನೆಲಕಚ್ಚಿದೆ ಎಂದಿದ್ದಾರೆ. "ಸನಾತನ ಧರ್ಮವನ್ನು ದುರುಪಯೋಗಪಡಿಸಿಕೊಂಡರೆ, ನಿಂದಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದಕ್ಕೆ ಈ ಚುನಾವಣೆಯೇ ನಿದರ್ಶನ. ಅಭೂತಪೂರ್ವ ಗೆಲುವು ದಾಖಲಿಸಿದ ಬಿಜೆಪಿಗೆ ಅಭಿನಂದನೆಗಳು. ಈ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಾಯಕತ್ವಕ್ಕೆ ಹಿಡಿದ ಕನ್ನಡಿ. ತಳಮಟ್ಟದಲ್ಲಿ ಅದ್ಭುತ ಕೆಲಸ ಮಾಡಿದ ಪಕ್ಷದ ಕಾರ್ಯಕರ್ತರ ಶ್ರಮದ ಫಲ" ಎಂದು ಪೋಸ್ಟ್ ಮಾಡಿದ್ದಾರೆ.