ನವದೆಹಲಿ: ಜ್ವರ ಹಾಗೂ ಆಯಾಸದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಬುಧವಾರ ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯವು ಸ್ಥಿರವಾಗಿದೆ ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ.
ಮನಮೋಹನ್ ಸಿಂಗ್ ಅವರು ಜ್ವರದ ಬಗ್ಗೆ ಪರೀಕ್ಷೆಗಾಗಿ ದೆಹಲಿಯ ಏಮ್ಸ್ಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿದೆ ಎಂದು ಏಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಿಂಗ್ ಅವರು ಆಸ್ಪತ್ರೆಗೆ ದಾಖಲಾಗಿರುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಪ್ರಕಟಣೆ ಸಹ ಹೊರಡಿಸಿದ್ದು, ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎಂದು ತಿಳಿಸಿತ್ತು. ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನ ಹೃದ್ರೋಗ ವಿಭಾಗದಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
88 ವರ್ಷದ ಮಾಜಿ ಪ್ರಧಾನಿ ಈ ಹಿಂದೆ ಕೂಡ ಕೋವಿಡ್ ಸೋಂಕಿನಿಂದಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಸಂಪೂರ್ಣವಾಗಿ ಚೇತರಿಸಿಕೊಂಡಿದ್ದ ಅವರು, ಕೆಲ ದಿನಗಳ ನಂತರ ಬಿಡುಗಡೆಗೊಂಡಿದ್ದರು.
ಇದನ್ನೂ ಓದಿ:ಏಮ್ಸ್ ಆಸ್ಪತ್ರೆಗೆ ದಾಖಲಾದ ಮಾಜಿ ಪಿಎಂ ಮನಮೋಹನ್ ಸಿಂಗ್