ಶ್ರೀನಗರ(ಜಮ್ಮು-ಕಾಶ್ಮೀರ):ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಬಡಿಗಮ್ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ. ಇನ್ನೊಂದೆಡೆ, ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ಸ್ಥಳಕ್ಕೆ ತೆರಳುತ್ತಿದ್ದಾಗ ಯೋಧರ ವಾಹನ ಅಪಘಾತಕ್ಕೀಡಾಗಿ ಇಬ್ಬರು ಯೋಧರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಯೋಧರು ಕಾರ್ಯಾಚರಣೆ ನಡೆಸಿದ್ದು, ಇಲ್ಲಿಯವರೆಗೆ ನಾಲ್ವರ ಹೆಡೆಮುರಿ ಕಟ್ಟಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಬಡಿಗಮ್ನಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಉಗ್ರರು ಅಡಗಿ ಕುಳಿತಿದ್ದ ಜಾಗಕ್ಕೆ ಯೋಧರು ಆಗಮಿಸುತ್ತಿದ್ದಂತೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ನಡೆದ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.