ಹೈದರಾಬಾದ್:ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಅಬ್ಬರದ ಪ್ರಚಾರದಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಆಡಳಿತಾರೂಢ ಟಿಆರ್ಎಸ್ ಪಕ್ಷ 55 ವಾರ್ಡ್ಗಳಲ್ಲಿ ಗೆಲುವು ಸಾಧಿಸಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಕಳೆದ ಚುನಾವಣೆಯಲ್ಲಿ ಕೇವಲ ನಾಲ್ಕು ಸ್ಥಾನ ಗೆದ್ದಿದ್ದ ಭಾರತೀಯ ಜನತಾ ಪಾರ್ಟಿ 48 ವಾರ್ಡ್ಗಳಲ್ಲಿ ಗೆಲುವು ಸಾಧಿಸುವ ಮೂಲಕ ಮಹತ್ಸಾಧನೆ ಮಾಡಿದೆ. ಅಸಾದುದ್ದೀನ್ ಒವೈಸಿ ನೇತೃತ್ವದ ಎಐಎಂಐಎಂ 44 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಇದೇ ಮೊದಲ ಬಾರಿಗೆ ಏಕಾಂಕಿಯಾಗಿ ಕಣಕ್ಕಿಳಿದಿದ್ದ ಬಿಜೆಪಿ ಅಚ್ಚರಿಯ ಫಲಿತಾಂಶ ಪಡೆದುಕೊಂಡು, ಟಿಆರ್ಎಸ್ಗೆ ಎಚ್ಚರಿಕೆ ಗಂಟೆ ನೀಡಿದೆ. ಇನ್ನೊಂದೆಡೆ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿರುವ ಕಾಂಗ್ರೆಸ್ ಮುಖಭಂಗ ಅನುಭವಿಸಿದೆ. ಅಷ್ಟೇ ಅಲ್ಲ ಟಿಪಿಸಿಸಿ ಅಧ್ಯಕ್ಷ ಉತ್ತಮ್ ಕುಮಾರ್ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಫಲಿತಾಂದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಹೈದರಾಬಾದ್ನಲ್ಲಿ ಬಿಜೆಪಿಗೆ ಐತಿಹಾಸಿಕ ಫಲಿತಾಂಶ ದೊರಕಿದೆ. ಇದು ಪ್ರಧಾನಿ ಮೋದಿಯವರ ಅಭಿವೃದ್ಧಿ ಮತ್ತು ಆಡಳಿತದ ಮಾದರಿಗೆ ಜನರ ಬೆಂಬಲವನ್ನು ತೋರಿಸುತ್ತದೆ. ಐತಿಹಾಸಿಕ ಫಲಿತಾಂಶ ನೀಡದ ಹೈದರಾಬಾದ್ ಜನರಿಗೆ ಧನ್ಯವಾದ ತಿಳಿಸಲು ಬಯಸುತ್ತೇನೆ ಎಂದಿದ್ದಾರೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ ಮತ್ತು ಪಕ್ಷದ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಸೇರಿದಂತೆ ಬಿಜೆಪಿ ನಾಯಕರು ಸಿಹಿತಿಂಡಿ ಹಂಚಿ ಸಂಭ್ರಮಿಸಿದ್ದಾರೆ.