ನವದೆಹಲಿ :ಚುನಾವಣೆ ನಡೆಯುವ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಬಂಧನ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ವಿಪಕ್ಷಗಳ ನಾಯಕರ ಮೇಲೆ ಒತ್ತಡ ಹೇರಲು ಮತ್ತು ಬೆದರಿಕೆ ಹಾಕಲು ಕೇಂದ್ರ ಸರ್ಕಾರ ತನಿಖಾ ಏಜೆನ್ಸಿಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಲ್ಲಿ ಭೂಪಿಂದರ್ ಸಿಂಗ್ ಹನಿ ಅವರನ್ನು ಜಾರಿ ನಿರ್ದೇನಾಲಯ ಬಂಧಿಸಿತ್ತು. ಇದು ಪಂಜಾಬ್ ಸಿಎಂ ಅವರನ್ನು ಒತ್ತಡಕ್ಕೆ ಸಿಲುಕಿಸುವ ಪ್ರಯತ್ನವಾಗಿದೆ. ಚುನಾವಣೆ ಸಂದರ್ಭದಲ್ಲಿ ಇದಕ್ಕೆ ಅವಕಾಶ ನೀಡಬಾರದು ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಆಗ್ರಹಿಸಿದ್ದಾರೆ.
ಗುರುವಾರ ತಡರಾತ್ರಿ ಜಲಂಧರ್‌ನಲ್ಲಿ ಭೂಪಿಂದರ್ ಅವರನ್ನು ಬಂಧಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದ್ದು, ಮೊಹಾಲಿಯ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.