ಶ್ರೀನಗರ(ಜಮ್ಮು ಕಾಶ್ಮೀರ): ಇಲ್ಲಿನ ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಸುಮಾರು 21 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹೆಚ್ಚಿನವರು ನಾಗರಿಕರಾಗಿದ್ದಾರೆ ಎನ್ನಲಾಗ್ತಿದೆ.
ಶ್ರೀನಗರದ ಹಿರಿಯ ಪೊಲೀಸ್ ಅಧೀಕ್ಷಕ ರಾಕೇಶ್ ಬಲಾವಾಲ್ ಮಾಹಿತಿ ನೀಡಿದ್ದು, 70 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ತಿಳಿಸಿದ್ದಾರೆ.
ರಾಜಧಾನಿಯ ಅಮೀರಾ ಕಡಲ್ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಭದ್ರತಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಕೇಂದ್ರೀಯ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ತಿಳಿಸಿದೆ.
ಶ್ರೀನಗರದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ ಸಮೀಪದ ಎಸ್‌ಎಂಎಚ್‌ಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಕನ್ವಾಲ್‌ಜೀತ್ ಸಿಂಗ್ ಪ್ರತಿಕ್ರಿಯಿಸಿದ್ದು, ಗಾಯಗೊಂಡಿರುವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲಾ ಗಾಯಾಳುಗಳ ಗುರುತುಗಳು ಇನ್ನೂ ನಮಗೆ ಲಭ್ಯವಾಗಿಲ್ಲ ಎಂದಿದ್ದಾರೆ.
ಅಮೀರ ಕಡಲ್ ಒಂದು ವಾಣಿಜ್ಯ ಪ್ರದೇಶವಾಗಿದ್ದು, ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಜಮಾಯಿಸುತ್ತಾರೆ.