ನವದೆಹಲಿ:ದ್ವೇಷ ಭಾಷಣ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ (ಎಸ್ಪಿ) ಹಿರಿಯ ನಾಯಕ ಮತ್ತು ಉತ್ತರ ಪ್ರದೇಶದ ಮಾಜಿ ಸಚಿವ ಆಜಂ ಖಾನ್ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ವನಿ ಮಾದರಿಯನ್ನು ನೀಡಲು ಸೂಚಿಸಿದ್ದ ವಿಚಾರಣಾ ಕೋರ್ಟ್ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಎ. ಎಸ್ ಬೋಪಣ್ಣ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠವು ಆಜಂ ಖಾನ್ ಅವರ ಮನವಿಯನ್ನು ಪುರಸ್ಕರಿಸಿದ್ದು, ದ್ವೇಷ ಭಾಷಣ ಮಾಡಿದ ಧ್ವನಿ ಮಾದರಿ ನೀಡುವ ಕೋರ್ಟ್ ಆದೇಶಕ್ಕೆ ತಡೆ ನೀಡಿ, ಉತ್ತರ ಪ್ರದೇಶ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
ಪ್ರಕರಣವೇನು?:2007 ರಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರ ವಿರುದ್ಧ ಎಸ್ಪಿ ಹಿರಿಯ ನಾಯಕ ಆಜಂಖಾನ್ ಅವರು ಅವಹೇಳನಕಾರಿ ಭಾಷೆ ಬಳಸಿ ದ್ವೇಷ ಭಾಷಣ ಮಾಡಿದ ಆರೋಪದ ಪ್ರಕರಣ ದಾಖಲಾಗಿದೆ. ಇದರ ವಿಚಾರಣೆ ನಡೆಸಿದ್ದ ವಿಚಾರಣಾ ಕೋರ್ಟ್, ಇದಕ್ಕೆ ಸಂಬಂಧಿಸಿದಂತೆ ಧ್ವನಿ ಮಾದರಿಯನ್ನು ನೀಡಲು ಸೂಚಿಸಿತ್ತು. ಇದನ್ನು ಅಲಹಾಬಾದ್ ಹೈಕೋರ್ಟ್ ಕೂಡ ಎತ್ತಿಹಿಡಿದಿತ್ತು.
ಇದನ್ನು ಪ್ರಶ್ನಿಸಿದ ಆಜಂ ಖಾನ್ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದನ್ನೀಗ ಕೋರ್ಟ್ ಪುರಸ್ಕರಿಸಿದ್ದು, 2007ರ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದ ಧ್ವನಿ ಮಾದರಿ ನೀಡುವ ಆದೇಶಕ್ಕೆ ಬುಧವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.