ಚೆನ್ನೈ, ತಮಿಳುನಾಡು:ತಮಿಳುನಾಡಿನಲ್ಲಿ ಧಾರಾಕಾರ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ತಮಿಳುನಾಡಿನ ರಾಜಧಾನಿ ಚೆನ್ನೈ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈಗಾಗಲೇ ತಮಿಳುನಾಡಿನ 18 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಕಟ್ಟೆಚ್ಚರ ವಹಿಸಿದೆ.
ಶಾಲಾ-ಕಾಲೇಜುಗಳಿಗೆ ರಜೆ:ನಿರಂತರ ಭಾರೀ ಮಳೆಯಿಂದಾಗಿ ತಮಿಳುನಾಡಿನ ಚೆನ್ನೈ, ನೆಲ್ಲೈ, ಕನ್ಯಾಕುಮಾರ್, ಥೇಣಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. 6ರ ವರೆಗೆ ತಮಿಳುನಾಡಿನಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯೂ ಪ್ರಕಟಿಸಿದೆ. ಅಲ್ಲದೆ, ನೈಋತ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಮಧ್ಯಪಶ್ಚಿಮ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕಳೆದ ಕೆಲ ದಿನಗಳಿಂದ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಸತತ ಭಾರೀ ಮಳೆಯಿಂದಾಗಿ ನೆಲ್ಲೈ, ತೆಂಕಶಿ, ಥೇಣಿ, ದಿಂಡಿಗಲ್ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಚೆನ್ನೈ, ಶಿವಗಂಗೈ, ಮಧುರೈ, ಕನ್ಯಾಕುಮಾರಿ ಮತ್ತು ಮೈಲಾಡುತುರೈನಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.