ನವದೆಹಲಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಹಿಮಾಚಲ ಪ್ರದೇಶದ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅನುಪ್ ಕೇಸರಿ ಮತ್ತು ಮತ್ತಿಬ್ಬರು ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದರಿಂದಾಗಿ ಹಿಮಾಚಲ ಪ್ರದೇಶದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಭಾರಿ ಹಿನ್ನಡೆ ಉಂಟಾಗಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ. ಅನುಪ್ ಕೇಸರಿ ಅವರ ಜೊತೆಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಸತೀಶ್ ಠಾಕೂರ್ ಮತ್ತು ಉನಾ ಜಿಲ್ಲಾ ಮುಖ್ಯಸ್ಥ ಇಕ್ಬಾಲ್ ಸಿಂಗ್ ಅವರು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ಸೇರ್ಪಡೆ ಕುರಿತಂತೆ ಮಾತನಾಡಿರುವ ಅನುಪ್ ಕೇಸರಿ ನಾವು ಹಿಮಾಚಲ ಪ್ರದೇಶದಲ್ಲಿ ಕಳೆದ ಎಂಟು ವರ್ಷಗಳಿಂದ ಆಮ್ ಆದ್ಮಿ ಪಕ್ಷಕ್ಕಾಗಿ ಅತ್ಯಂತ ಪ್ರಾಮಾಣಿಕತೆ ಮತ್ತು ಸಮರ್ಪಣಾ ಭಾವದಿಂದ ಹಗಲಿರುಳು ಕೆಲಸ ಮಾಡುತ್ತಿದ್ದೇವೆ. ಆದರೆ, ಅರವಿಂದ್ ಕೇಜ್ರಿವಾಲ್ ಅವರು ಮಂಡಿಯಲ್ಲಿ ರೋಡ್‌ಶೋಗೆ ಬಂದಾಗ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಕಡೆಗಣನೆಯನ್ನು ಹಿಮಾಚಲ ಪ್ರದೇಶದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಅವಮಾನವೆಂದು ಪರಿಗಣಿಸಿದ್ದಾರೆ. ಆದರೆ ಎಲ್ಲಾ ಕಾರ್ಯಕರ್ತರು ತಮ್ಮ ಸ್ವಾಭಿಮಾನಕ್ಕಾಗಿ ಪಕ್ಷವನ್ನು ತೊರೆದಿದ್ದಾರೆ ಎಂದು ಅನುಪ್ ಕೇಸರಿ ಹೇಳಿದ್ದಾರೆ.