ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ನಿನ್ನೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶೇಕಡಾ 73.23 ರಷ್ಟು ಮತದಾನವಾಗಿದೆ. ಈ ಬಾರಿ ಸೋಲನ್ ಜಿಲ್ಲೆಯಲ್ಲಿ ಶೇ 76.82 ರಷ್ಟು ಅಂದರೆ, ರಾಜ್ಯದಲ್ಲೇ ಅತಿ ಹೆಚ್ಚು ಮತದಾನವಾಗಿದೆ. ಇನ್ನುಳಿದಂತೆ, ಶಿಮ್ಲಾದಲ್ಲಿ ಶೇ 69.88, ಉನಾದಲ್ಲಿ ಶೇ 76.69 ಹಾಗು ಕುಲುವಿನಲ್ಲಿ ಶೇ 76.15ರಷ್ಟು ವೋಟಿಂಗ್ ದಾಖಲಾಗಿದೆ.
ಬೆಳಗ್ಗೆ 8 ಗಂಟೆಗೆ ಆರಂಭವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಯಿತು. ರಾಜ್ಯದ 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆದಿದೆ. ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್, ಎಎಪಿ ಮತ್ತು ಇತರೆ ಪಕ್ಷಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರವಾಗಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.