ಮುಂಬೈ (ಮಹಾರಾಷ್ಟ್ರ):ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಪ್ರತಿಪಕ್ಷಗಳ 'ಇಂಡಿಯಾ' ಮೈತ್ರಿಕೂಟವು ಇಂದು 13 ಸದಸ್ಯರ ಸಮನ್ವಯ ಸಮಿತಿ ರಚಿಸಿತು. ಇದೇ ವೇಳೆ, ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸುವ ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಮೈತ್ರಿಕೂಟದ ನಾಯಕರು ಪ್ರಕಟಿಸಿದ್ದಾರೆ.
ಬಿಹಾರದ ಪಾಟ್ನಾ ಹಾಗೂ ಬೆಂಗಳೂರಿನಲ್ಲಿ ಈಗಾಗಲೇ ಪ್ರತಿಪಕ್ಷಗಳ ನಾಯಕರು ಎರಡು ಸಭೆಗಳನ್ನು ಮಾಡಿದ್ದು, ಗುರುವಾರದಿಂದ ಮುಂಬೈನಲ್ಲಿ ಮೂರನೇ ಸಭೆ ಸೇರಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಟಿಎಂಸಿ ನಾಯಕಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಬಿಹಾರ ಸಿಎಂ ನಿತೀಶ್ ಕುಮಾರ್, ಆರ್ಜೆಡಿ ನಾಯಕ ಲಾಲು ಪ್ರಸಾದ್ ಸೇರಿ ಹಲವು ಪಕ್ಷಗಳ ನಾಯಕರು ಪಾಲ್ಗೊಂಡಿದ್ದಾರೆ. ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟದ ಪ್ರತಿಪಕ್ಷಗಳು ಜಂಟಿಯಾಗಿ ಸ್ಪರ್ಧೆ ಮಾಡುವ ನಿರ್ಣಯವನ್ನು ತೆಗೆದುಕೊಂಡಿದ್ದೇವೆ ಎಂದು ನಾಯಕರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಇದರ ಜೊತೆಗೆ, ವಿವಿಧ ರಾಜ್ಯಗಳಲ್ಲಿ ಸೀಟು ಹಂಚಿಕೆಯ ಪ್ರಕ್ರಿಯೆ ತಕ್ಷಣವೇ ಪ್ರಾರಂಭಿಸಲಾಗುತ್ತದೆ. ಅದಷ್ಟು ಬೇಗ ಸೀಟು ಕೊಡು-ಕೊಳ್ಳುವಿಕೆಯ ಪ್ರಕ್ರಿಯೆಯನ್ನು ಸಹಕಾರಿ ಮನೋಭಾವದಲ್ಲಿ ಮುಗಿಸಲಾಗುತ್ತದೆ. ಸಾರ್ವಜನಿಕರ ಸಮಸ್ಯೆಯ ವಿಷಯಗಳನ್ನು ಮುಂದಿಟ್ಟುಕೊಂಡು ದೇಶದ ವಿವಿಧ ಭಾಗಗಳಲ್ಲಿ ಶೀಘ್ರವೇ ರ್‍ಯಾಲಿಗಳನ್ನೂ ನಡೆಸುತ್ತೇವೆ. ವಿವಿಧ ಭಾಷೆಗಳಲ್ಲಿ 'ಜುಡೇಗಾ ಭಾರತ್, ಜೀತೇಗಾ ಇಂಡಿಯಾ' ಎಂಬ ವಿಷಯದ ಕುರಿತು ತಮ್ಮ ಸಂವಹನ ತಂತ್ರಗಳು, ಪ್ರಚಾರಗಳನ್ನು ಸಂಘಟಿಸಲು ನಿರ್ಣಯಿಸಲಾಗಿದೆ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.