ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 7,974 ಮಂದಿ ಹೊಸ ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, 343 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ದೇಶದಲ್ಲಿ ಸದ್ಯಕ್ಕೆ ಒಟ್ಟು 87,245 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿದ್ದು, ಶೇಕಡಾ ದರ 0.25 ರಷ್ಟಿದೆ. ಜೊತೆಗೆ ನಿನ್ನೆ 343 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 4,76,478 ಕ್ಕೆ ಏರಿಕೆಯಾಗಿದೆ.
ಕಳೆದ ಒಂದುವರೆ ತಿಂಗಳಿಂದ ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು 15,000 ಕ್ಕಿಂತ ಕಡಿಮೆ ಕಂಡು ಬರುತ್ತಿವೆ. ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 125 ಮಂದಿ ಸೋಂಕಿತರು ಸಾವನ್ನಪ್ಪಿದ್ದು, 4,006 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ 925 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ 317 ಹೊಸ ಪ್ರಕರಣಗಳು ಕಂಡುಬಂದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಕಳೆದ 24 ಗಂಟೆಗಳಲ್ಲಿ 7,948 ಜನರು ವೈರಸ್‌ನಿಂದ ಚೇತರಿಸಿಕೊಂಡಿದ್ದು, ದೇಶದಲ್ಲಿ ಚೇತರಿಕೆ ಪ್ರಮಾಣ ಶೇ. 98.38 ಇದೆ. ಈವರೆಗೆ ದೇಶದಲ್ಲಿ ಕೊರೊನಾದಿಂದ ಚೇತರಿಸಿಕೊಂಡವರ ಸಂಖ್ಯೆ 3,41,54,879 ಕ್ಕೆ ಏರಿಕೆಯಾಗಿದೆ.