ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 7,081 ಮಂದಿ ಹೊಸ ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, 264 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ದೇಶದಲ್ಲಿ ಸದ್ಯಕ್ಕೆ ಒಟ್ಟು 83,913 ಸಕ್ರಿಯ ಪ್ರಕರಣಗಳಿವೆ. ಕಳೆದ ಮಾರ್ಚ್ 2020 ರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ಜೊತೆಗೆ ನಿನ್ನೆ 264 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ4,77,422 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಬರೋಬ್ಬರಿ 7,469 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶದಲ್ಲಿ 3,41,78,940 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ ಚೇತರಿಕೆ ದರ ಶೇ. 98.38 ರಷ್ಟಿದೆ.
ಕಳೆದ ಒಂದೂವರೆ ತಿಂಗಳಿನಿಂದ ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು 15,000 ಕ್ಕಿಂತ ಕಡಿಮೆ ಕಂಡುಬರುತ್ತಿವೆ. ದೈನಂದಿನ ಕೋವಿಡ್ ಪಾಸಿಟಿವಿಟಿ ದರವು ಕಡಿಮೆಯಾಗಿದೆ. ದೇಶದಲ್ಲಿ ಕೋವಿಡ್ ರೂಪಾಂತರಿ ತಳಿ ಒಮಿಕ್ರಾನ್ ಆತಂಕದ ಹಿನ್ನೆಲೆ ಲಸಿಕಾ ಅಭಿಯಾನ ಕಾರ್ಯ ಚುರುಕುಗೊಳಿಸಲಾಗಿದ್ದು, ಇದುವರೆಗೆ 1,37,46,13,252 ಕ್ಕೂ ಅಧಿಕ ಲಸಿಕಾ ಡೋಸ್ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ 12,11,977 ಮಂದಿಯ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೆ ಒಟ್ಟು ದೇಶದಲ್ಲಿ 66,41,09,365 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ.