ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 7,495 ಮಂದಿ ಹೊಸ ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, 434 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ದೇಶದಲ್ಲಿ ಸದ್ಯಕ್ಕೆ ಒಟ್ಟು 78,291 ಸಕ್ರಿಯ ಪ್ರಕರಣಗಳಿವೆ. ಕಳೆದ ಕೆಲ ತಿಂಗಳಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ನಿನ್ನೆ 434 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 4,78,759 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 6,960 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶದಲ್ಲಿ 3,42,08,926 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ ಚೇತರಿಕೆ ದರ ಶೇ. 98.40 ರಷ್ಟಿದೆ.
ಕಳೆದ ಒಂದೂವರೆ ತಿಂಗಳಿನಿಂದ ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು 15,000 ಕ್ಕಿಂತ ಕಡಿಮೆ ಕಂಡುಬರುತ್ತಿವೆ. ದೇಶದಲ್ಲಿ ಕೋವಿಡ್ ರೂಪಾಂತರಿ ತಳಿ ಒಮಿಕ್ರಾನ್ ಆತಂಕದ ಹಿನ್ನೆಲೆ ಲಸಿಕಾ ಅಭಿಯಾನ ಕಾರ್ಯ ಚುರುಕುಗೊಳಿಸಲಾಗಿದ್ದು, ಇದುವರೆಗೆ 1,39,69,76,774 ಕ್ಕೂ ಅಧಿಕ ಲಸಿಕಾ ಡೋಸ್ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Omicron cases in India : ದೇಶದಲ್ಲಿ ಕೋವಿಡ್ ರೂಪಾಂತರಿ ತಳಿ ಒಮಿಕ್ರಾನ್ ಆತಂಕ ಮೂಡಿಸಿದೆ. ಡಿಸೆಂಬರ್ 2 ರಂದು ಕರ್ನಾಟಕದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿತ್ತು. ಭಾರತದಲ್ಲಿ ಸದ್ಯಕ್ಕೆ ಒಟ್ಟು 236 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ಒಟ್ಟು 104 ಮಂದಿ ಒಮಿಕ್ರಾನ್ ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತಮಿಳುನಾಡಿನಲ್ಲಿ ಈವರೆಗೆ ಒಟ್ಟು 34 ಒಮಿಕ್ರಾನ್ ಕೇಸ್ಗಳು ಕಂಡುಬಂದಿದೆ.