ನವದೆಹಲಿ: ದಿನವೊಂದರಲ್ಲಿ ಪತ್ತೆಯಾಗುತ್ತಿರುವ ಕೋವಿಡ್ ಪ್ರಕರಣಗಳ ಪೈಕಿ ಅಮೆರಿಕವನ್ನ ಹಿಂದಿಕ್ಕಿರುವ ಭಾರತದಲ್ಲಿ ವೈರಸ್ ಅಬ್ಬರ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ದಾಖಲೆಯ 1,45,384 ಸೋಂಕಿತರು ಪತ್ತೆಯಾಗಿದ್ದು, 794 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ದೇಶದಲ್ಲೀಗ ಸೋಂಕಿತರ ಸಂಖ್ಯೆ 1,32,05,926 ಹಾಗೂ ಮೃತರ ಸಂಖ್ಯೆ 1,68,436ಕ್ಕೆ ಏರಿಕೆಯಾಗಿದೆ. ಅಷ್ಟೇ ಅಲ್ಲ ಇಳಿಕೆಯಾಗಿದ್ದ ಸಕ್ರಿಯ ಪ್ರಕರಣಗಳ ಸಂಖ್ಯೆ ಈಗ 10,46,631ಕ್ಕೆ ಜಿಗಿದಿದೆ. ಒಟ್ಟು ಸೋಂಕಿತರ ಪೈಕಿ 1,19,90,859 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
9.80 ಕೋಟಿ ಮಂದಿಗೆ ಲಸಿಕೆ
ಇಲ್ಲಿಯರೆಗೆ ಆರೋಗ್ಯ ಕಾರ್ಯಕರ್ತರು, ಕೋವಿಡ್ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟವರಿಗೂ ವ್ಯಾಕ್ಸಿನ್ ನೀಡಲಾಗುತ್ತಿದೆ. ಜನವರಿ 16ರಿಂದ ಈವರೆಗೆ ಒಟ್ಟು 9,80,75,160 ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ.
ಕೋವಿಡ್ ಟೆಸ್ಟಿಂಗ್ ಅಪ್ಡೇಟ್ಸ್
25.52 ಕೋಟಿ ಜನರಿಗೆ ಕೋವಿಡ್ ಟೆಸ್ಟ್
ಏಪ್ರಿಲ್ 9ರ ವರೆಗೆ 25,52,14,803 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 11,73,219ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.