ಲಖನೌ(ಉತ್ತರ ಪ್ರದೇಶ): ಕಳೆದ ಕೆಲ ದಿನಗಳ ಹಿಂದೆ ದೆಹಲಿಯ ಜಹಾಂಗಿರ್ಪುರಿಯಲ್ಲಿ ನಡೆದ ಭೀಕರ ಹಿಂಸಾಚಾರ ಅನೇಕ ವಿವಾದಗಳಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚೆತ್ತುಕೊಂಡಿದ್ದು, ರಾಜ್ಯದ ಜನರ ಹಿತದೃಷ್ಟಿಯಿಂದ ಮಹತ್ವದ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ವಿಚಾರವಾಗಿ ಪ್ರಮುಖ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಅವರು, ಯಾವುದೇ ರೀತಿಯ ಧಾರ್ಮಿಕ ಮೆರವಣಿಗೆ ನಡೆಸಲು ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಸಿಎಂ, ಸರ್ಕಾರದ ಅನುಮತಿ ಇಲ್ಲದೇ ಯಾವುದೇ ರೀತಿಯ ಮೆರವಣಿಗೆ, ಶೋಭಾಯಾತ್ರೆ ನಡೆಸುವಂತಿಲ್ಲ. ಅನುಮತಿ ನೀಡುವ ಮೊದಲು ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಬಗ್ಗೆ ಸಂಘಟಕರಿಂದ ಅಫಿಡವಿಟ್ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದು, ಸಾಂಪ್ರದಾಯಿಕ ಧಾರ್ಮಿಕ ಮೆರವಣಿಗೆಗಳಿಗೆ ಮಾತ್ರ ಅನುಮತಿ ನೀಡಬೇಕು ಎಂದು ತಿಳಿಸಿದ್ದಾರೆ.