ಕಲಿಯಾಗಂಜ್: ಪಶ್ಚಿಮ ಬಂಗಾಳದ ಕಲಿಯಾಗಂಜ್‌ನಲ್ಲಿ ಬುಡಕಟ್ಟು ಸಮುದಾಯದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಹಮ್ಮಿಕೊಂಡ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿ ಕಲ್ಲು ತೂರಾಟ ನಡೆಸಿದ್ದಾರೆ. ಆಕ್ರೋಶಗೊಂಡ ಗುಂಪು ಹಲವಾರು ಅಂಗಡಿಗಳನ್ನು ಧ್ವಂಸಗೊಳಿಸಿ, ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಿದೆ. ಇದರಿಂದ ಈ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಈ ವೇಳೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾರೆ.
ಪೊಲೀಸ್ ಸಿಬ್ಬಂದಿ ಸಂತ್ರಸ್ತೆಯ ಮೃತ ದೇಹವನ್ನು ಬೀದಿಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋಗಳು ವೈರಲ್ ಆದ ಬಳಿಕ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಪೊಲೀಸರ ಪ್ರಕಾರ, ಉತ್ತರ ದಿನಾಜ್‌ಪುರ ಜಿಲ್ಲೆಯ ಬಾಲಕಿ ಗುರುವಾರ ಸಂಜೆ ಟ್ಯೂಷನ್‌ಗೆ ಹೋದ ನಂತರ ನಾಪತ್ತೆಯಾಗಿದ್ದಳು. ಸಂಬಂಧಿಕರು ಮತ್ತು ಗ್ರಾಮಸ್ಥರು ಹುಡುಕಾಟ ನಡೆಸಿದರೂ ಇಡೀ ರಾತ್ರಿ ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಬಳಿಕ ಬಾಲಕಿ ಶವವಾಗಿ ಪತ್ತೆಯಾಗಿದ್ದಳು. ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಸಂತ್ರಸ್ತೆಯ ತಾಯಿಯು ನಾಲ್ವರು ಆರೋಪಿಗಳ ವಿರುದ್ಧ ದೂರು ದಾಖಲಿಸಿ, ತನ್ನ ಮಗಳ ಸಾವಿನ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ.
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಹಂಚಿಕೊಂಡ ವಿಡಿಯೋದಲ್ಲಿ, "ಕೆಲವು ಪೊಲೀಸ್ ಅಧಿಕಾರಿಗಳು ಉತ್ತರ ದಿನಾಜ್‌ಪುರದ ಕಲಿಯಾಗಂಜ್‌ನಲ್ಲಿ ಅಪ್ರಾಪ್ತ ಅತ್ಯಾಚಾರ ಮತ್ತು ಕೊಲೆ ಸಂತ್ರಸ್ತೆಯ ಮೃತ ದೇಹವನ್ನು ಬೀದಿಯಲ್ಲಿ ಎಳೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಸಾಕ್ಷ್ಯವನ್ನು ನಾಶಪಡಿಸುವ ಅಥವಾ ಅಪರಾಧವನ್ನು ಮುಚ್ಚಿಹಾಕುವ ಉದ್ದೇಶದಿಂದ ಇಂತಹ ಕೃತ್ಯ ನಡೆಸುತ್ತಿರುವಂತೆ ಕಂಡುಬಂದಿದೆ" ಎಂದು ಮಾಳವಿಯಾ ಟ್ವೀಟ್ ಮಾಡಿ ದೂರಿದ್ದರು.
ರಾಷ್ಟ್ರೀಯ ಮಹಿಳಾ ಆಯೋಗವು (ಎನ್‌ಸಿಡಬ್ಲ್ಯೂ) ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ನ್ಯಾಯಯುತ ತನಿಖೆ ನಡೆಸುವಂತೆ ಪಶ್ಚಿಮ ಬಂಗಾಳ ಪೊಲೀಸರನ್ನು ಕೇಳಿದೆ. ಆರೋಪಗಳು ನಿಜವೆಂದು ಕಂಡುಬಂದಲ್ಲಿ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಬೇಕು ಎಂದು ಆಯೋಗವು ಕೋರಿದೆ. ಅಲ್ಲದೇ ಮೃತದೇಹವನ್ನು ಅನುಚಿತವಾಗಿ ಎಳೆದಿದ್ದಕ್ಕಾಗಿ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು" ಎಂದು ಆಯೋಗ ಆಗ್ರಹಿಸಿದೆ. ಮೂರು ದಿನಗಳೊಳಗೆ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.
ಸಿಬಿಐ ತನಿಖೆಗೆ ಒತ್ತಾಯ: ಕಲಿಯಗಂಜ್‌ಗೆ ಭೇಟಿ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್, ಸಂತ್ರಸ್ತೆಯ ತಾಯಿಯ ಬೇಡಿಕೆಯಂತೆ ಘಟನೆಯ ಕುರಿತು ಸಿಬಿಐ ತನಿಖೆಗೆ ಒತ್ತಾಯಿಸಿದರು. ಈ ನಿಟ್ಟಿನಲ್ಲಿ ಪಕ್ಷವು ನ್ಯಾಯಾಲಯಕ್ಕೆ ಮನವಿ ಮಾಡಲಿದೆ ಎಂದರು. ಅಲ್ಲದೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವತಂತ್ರ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು. ಪ್ರಕರಣವನ್ನು ಸರಿಯಾಗಿ ನಿರ್ವಹಿಸಲು ಅಸಮರ್ಥರಾಗಿರುವ ರಾಯಗಂಜ್ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಕಲಿಯಗಂಜ್ ಪೊಲೀಸ್ ಠಾಣಾಧಿಕಾರಿ ವಿರುದ್ಧ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದರು.
ಇಬ್ಬರ ಬಂಧನ:ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಉತ್ತರ ದಿನಾಜ್‌ಪುರದ ಪೊಲೀಸ್ ವರಿಷ್ಠಾಧಿಕಾರಿ ಸನಾ ಅಖ್ತರ್ ಹೇಳಿದ್ದಾರೆ. ಅಪ್ರಾಪ್ತ ಬಾಲಕಿಯ ಶವದ ಬಳಿ ವಿಷಪೂರಿತ ಬಾಟಲಿ ಪತ್ತೆಯಾಗಿದೆ ಎಂದು ಅಖ್ತರ್ ಹೇಳಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಸಾವಿನ ಕಾರಣ ಪತ್ತೆಗೆ ವೈದ್ಯಕೀಯ ಮಂಡಳಿಯನ್ನು ರಚಿಸಲಾಗಿದೆ. ಸಂತ್ರಸ್ತೆಯ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಅತ್ಯಾಚಾರವೆಸಗಿ ಬಾಲಕಿ ಕೊಲೆ ಆರೋಪ: ಪ.ಬಂಗಾಳದ ಕಲಿಯಾಗಂಜ್ ಪ್ರಕ್ಷುಬ್ಧ