ನವದೆಹಲಿ: ದೇಶದ ಅತಿದೊಡ್ಡ ಪಕ್ಷ (ಬಿಜೆಪಿ) ಗೂಂಡಾಗಿರಿಯಲ್ಲಿ ತೊಡಗಿದರೆ, ಅದರಿಂದ ಜನರಿಗೆ ತಪ್ಪು ಸಂದೇಶ ಹೋಗುತ್ತದೆ. ಇಂತಹ ಸನ್ನಿವೇಶದಲ್ಲಿ ದೇಶ ಪ್ರಗತಿ ಕಾಣಲು ಆಗುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ಕುರಿತಾದ ಹೇಳಿಕೆಯನ್ನು ಖಂಡಿಸಿ ಕೇಜ್ರಿವಾಲ್ ನಿವಾಸ ಮುಂದೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಿವಾಸದ ಹೊರಗಡೆಯ ಆಸ್ತಿಪಾಸ್ತಿಯನ್ನು ಹಾನಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದರ ಬೆನ್ನಲ್ಲೇ ಕೇಜ್ರಿವಾಲ್ ಈ ಹೇಳಿಕೆ ನೀಡಿದ್ದಾರೆ.