ಮಲಪ್ಪುರಂ: ಕೇರಳದ ಮಲಪ್ಪುರಂನ ತಾನೂರ್ ಪ್ರದೇಶದಲ್ಲಿ ಭಾನುವಾರ ಸಂಜೆ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೌಸ್‌ಬೋಟ್ ಮುಳುಗಿ 22 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ತಿಳಿದು ಬಂದಿದೆ.
ಪ್ರವಾಸಿ ದೋಣಿ ದಡದಿಂದ 300 ಮೀಟರ್ ದೂರದಲ್ಲಿ ಮುಳುಗಿದೆ. 11 ಜನರನ್ನು ರಕ್ಷಿಸಲಾಗಿದೆ. ರಕ್ಷಿಸಲ್ಪಟ್ಟ 7 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಮೃತರಲ್ಲಿ ಹೆಚ್ಚಿನವರು ಮಲಪ್ಪುರಂ ಜಿಲ್ಲೆಯ ತಾನೂರ್ ಮತ್ತು ಪರಪ್ಪನಂಗಡಿ ಮೂಲದವರು ಎಂದು ಹೇಳಲಾಗುತ್ತಿದೆ. ದೋಣಿ ಮಗುಚಿ ಸಂಪೂರ್ಣ ಮುಳುಗಿದೆ. ಬೋಟ್ನಲ್ಲಿ ಯಾವುದೇ ಸುರಕ್ಷತಾ ಸೌಲಭ್ಯಗಳು ಇರಲಿಲ್ಲ ಎಂದು ವರದಿಯಾಗಿದೆ. ಬೋಟ್ ಮಾಲೀಕ ತಲೆಮರೆಸಿಕೊಂಡಿದ್ದಾನೆ. ಘಟನಾ ಸ್ಥಳದಲ್ಲಿ ಇನ್ನೂರಕ್ಷಣಾ ಕಾರ್ಯ ನಡೆಯುತ್ತಿದೆ.
ಭಾನುವಾರ ರಜಾ ದಿನವಾದ್ದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿತ್ತು. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೋಣಿಯಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಗುಚಿ ಬಿದ್ದ ದೋಣಿಯನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ವಯಂ ಸೇವಕರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ದುರಂತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಪ್ರಧಾನಿ ಮೋದಿ ಸಂತಾಪ:ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. "ಕೇರಳದ ಮಲಪ್ಪುರಂನಲ್ಲಿ ಸಂಭವಿಸಿದ ದೋಣಿ ದುರಂತದಿಂದ ಪ್ರಾಣಹಾನಿಯಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಮೃತರ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು" ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.