ಕೊಯಿಕ್ಕೋಡ್(ಕೇರಳ):ಕೇರಳದ ಕೊಯಿಕ್ಕೋಡ್ನಲ್ಲಿ ಇಂದು (ಶುಕ್ರವಾರ) ಮತ್ತೊಂದು ನಿಫಾ ವೈರಸ್ ಪ್ರಕರಣ ದೃಢಪಟ್ಟಿದೆ. ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದ 39 ವರ್ಷದ ವ್ಯಕ್ತಿಗೆ ನಿಫಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಕೇರಳದಲ್ಲಿ ನಿಫಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಈ ಹಿಂದೆ ದೃಢಪಟ್ಟ ನಿಫಾ ವೈರಸ್ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗಿದ್ದ ಖಾಸಗಿ ಆಸ್ಪತ್ರೆಯಲ್ಲಿ 39 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ಲಕ್ಷಣಗಳು ಪತ್ತೆಯಾದ ನಂತರ ಅವರನ್ನು ಪ್ರತ್ಯೇಕಿಸಲಾಗಿದೆ. ಸದ್ಯ ಅವರಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ನಿಫಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಕೊಯಿಕ್ಕೋಡ್ ಜಿಲ್ಲೆಯಲ್ಲಿ ವೈರಸ್‌ನಿಂದ ಎರಡು ಸಾವು ದೃಢಪಟ್ಟ ನಂತರ, ಸೋಂಕು ತಡೆಗೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆೆ. ಪುಣೆಯಲ್ಲಿರುವ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್- ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (ಐಸಿಎಂಆರ್-ಎನ್‌ಐವಿ) ಹಾಗೂ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವರಾದ ಡಾ. ಭಾರತಿ ಪ್ರವೀಣ್ ಪವಾರ್ ಅವರು ಸಮಗ್ರ ಕ್ರಮಕ್ಕೆ ಮುಂದಾಗಿದ್ದಾರೆ. ಈ ಕುರಿತು ಡಾ.ಪವಾರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲು ಮತ್ತು ಸೋಂಕು ತಡೆಗಟ್ಟುವ ಕ್ರಮ ಜಾರಿಗೆ ಭಾರತ ಸರ್ಕಾರ ಸನ್ನದ್ಧವಾಗಿದೆ ಎಂದು ಡಾ. ಭಾರತಿ ಪ್ರವೀಣ್ ಪವಾರ್ ತಿಳಿಸಿದ್ದಾರೆ.