ನವದೆಹಲಿ:ಉತ್ತರ ಪ್ರದೇಶದ ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಘಟನೆಯನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಇಬ್ಬರು ವಕೀಲರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಲಖೀಂಪುರ್ ಖೇರಿ ಹಿಂಸಾಚಾರ ಕೇಸ್; ಸಿಬಿಐ ತನಿಖೆಗೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ - ಸಿಬಿಐ
ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಕೋರಿ ಇಬ್ಬರು ವಕೀಲರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಸಚಿವರ ವಿರುದ್ಧ ಕ್ರಮ ಕೈಗೊಳ್ಳಲು ಗೃಹ ಸಚಿವಾಲಯ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಕೋರಿದ್ದಾರೆ.
ಸುಪ್ರೀಂಕೋರ್ಟ್‌ನ ಉಸ್ತುವಾರಿಯಲ್ಲಿ ನಿಗದಿತ ಅವಧಿಯಲ್ಲಿ ತನಿಖೆ ನಡೆಸಬೇಕು ಎಂದು ಅರ್ಜಿದಾರ ವಕೀಲರು ತಿಳಿಸಿದ್ದಾರೆ. ಜೊತೆಗೆ ಘಟನೆ ಸಂಬಂಧ ಗೃಹ ಸಚಿವಾಲಯ ಮತ್ತು ಪೊಲೀಸ್ ಇಲಾಖೆ ಎಫ್‌ಐಆರ್ ದಾಖಲಿಸಿಕೊಂಡು ಪ್ರಕರಣದಲ್ಲಿ ಭಾಗಿಯಾಗಿರುವ ಸಚಿವರಿಗೆ ಶಿಕ್ಷೆ ನೀಡಲು ನಿರ್ದೇಶನ ನೀಡಬೇಕೆಂದು ಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಲಖೀಂಪುರ್ ಖೇರಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದ ರೈತರ ಮೇಲೆ ಕಾರು ಹರಿದ ಪರಿಣಾಮ ನಾಲ್ವರು ರೈತರು, ಓರ್ವ ಪತ್ರಕರ್ತ ಸೇರಿ 8 ಮಂದಿ ಮೃತಪಟ್ಟಿದ್ದರು. ಘಟನೆ ಸಂಬಂಧ ದೂರು ಆಧರಿಸಿ ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಟೆನಿ ಪುತ್ರ ಆಶೀಶ್ ಮಿಶ್ರಾ ಹಾಗೂ ಹಲವರ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಾಗಿದೆ. ಹತ್ಯೆ, ಅಪರಾಧ ಕೃತ್ಯಕ್ಕೆ ಪಿತೂರಿ ಹಾಗೂ ಇತರ 20 ಅಂಶಗಳನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.