ನವದೆಹಲಿ:ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು ಮಾಡಲಾಗಿದೆ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಕಳೆದ ವರ್ಷ ಅಕ್ಟೋಬರ್ 3 ರಂದು ಲಖಿಂಪುರ ಖೇರಿ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಮೃತಪಟ್ಟಿದ್ದರು. ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಮೂರು ಕುಟುಂಬ ಸದಸ್ಯರು ಫೆಬ್ರವರಿ 10 ರಂದು ಹೈಕೋರ್ಟ್‌ನ ಲಖನೌ ಪೀಠದ ಜಾಮೀನು ಆದೇಶಕ್ಕೆ ತಡೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಅವರ ತಂದೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಅದೇ ಸರ್ಕಾರದಲ್ಲಿ ಸಚಿವರಾಗಿರುವ ಕಾರಣ ಆರೋಪಿ ರಾಜ್ಯ ಸರ್ಕಾರದ ಮೇಲೆ ಸಾಕಷ್ಟು ಪ್ರಭಾವವನ್ನು ಹೊಂದಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.
ವಕೀಲ ಪ್ರಶಾಂತ್ ಭೂಷಣ್ ಮೂಲಕ ಜಗಜಿತ್ ಸಿಂಗ್, ಪವನ್ ಕಶ್ಯಪ್ ಮತ್ತು ಸುಖವಿಂದರ್ ಸಿಂಗ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ ಜಾಮೀನು ಅರ್ಜಿಯ ನೋಟಿಸ್ ಅನ್ನು ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ನೀಡಬೇಕು ಎಂದು ಹೇಳಲಾಗಿದೆ. ಮಿಶ್ರಾ ಅವರು ಉನ್ನತ ಸ್ಥಾನದಲ್ಲಿರುವುದರಿಂದ ಅವರು ಸಾಕ್ಷಿಗಳು ಮತ್ತು ಸಾಕ್ಷ್ಯಗಳನ್ನು ಹಾಳುಮಾಡುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.