ಲಖೀಂಪುರ ಖೇರಿ(ಉತ್ತರ ಪ್ರದೇಶ):ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾಗೆ ಸೇರಿದ್ದ ಕಾರು ಹರಿದು ನಾಲ್ವರು ರೈತರು ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಸಚಿವರ ಪುತ್ರ ಆಶಿಶ್ ಮಿಶ್ರಾ ಅ ವರನ್ನ ಬಂಧನ ಮಾಡಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸಿ ಇದೊಂದು ಪೂರ್ವನಿಯೋಜಿತ ಕೊಲೆ ಎಂಬ ಮಾಹಿತಿ ಹೊರಹಾಕಿದೆ.
ಲಖೀಂಪುರ ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯ ಬಗ್ಗೆ ಕೇಳಿದಾಗ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತಾಳ್ಮೆ ಕಳೆದುಕೊಂಡಿದ್ದು, ವರದಿಗಾರನೋರ್ವರ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಇದರ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಸಚಿವರು ಮತ್ತೊಂದು ವಿವಾದ ತಮ್ಮ ಮೇಲೆ ಎಳೆದುಕೊಂಡಿದ್ದಾರೆ.
ಸಚಿವ ಅಜಯ್ ಮಿಶ್ರಾ ತಮ್ಮ ಸಂಸದೀಯ ಕ್ಷೇತ್ರದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಆಗಮಿಸಿದ್ದರು. ಕಾರ್ಯಕ್ರಮ ಮುಕ್ತಾಯದ ಬಳಿಕ ಲಖೀಂಪುರ ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯ ವಿಚಾರವಾಗಿ ಪ್ರಶ್ನೆ ಕೇಳಿದ್ದಾರೆ. ಈ ವೇಳೆ ಕೋಪಗೊಂಡಿರುವ ಸಚಿವರು ಪತ್ರಕರ್ತನೊಂದಿಗೆ ಅನುಚಿತವಾಗಿ ವರ್ತನೆ ಮಾಡಿದ್ದು, ಆತನನ್ನು ತಳ್ಳಲು ಮುಂದಾಗಿದ್ದಾರೆ. ಜೊತೆಗೆ ಮೊಬೈಲ್ ಸ್ವೀಚ್ ಆಫ್ ಮಾಡುವಂತೆ ಸೂಚನೆ ನೀಡಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಇದೀಗ ವೈರಲ್ ಆಗಿವೆ.