ನವದೆಹಲಿ: ದೇಶದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರಿಂದ ಜೈಲು ಸೇರಿದ್ದ ನಾಯಕರು ಈಗ ಅವರ ಮೊಮ್ಮಗ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಟೀಕಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯನ್ನು ಎದುರಿಸಲು ಇಂದು ಪಾಟ್ನಾದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯೋಜಿಸಿದ್ದ ಪ್ರತಿಪಕ್ಷಗಳ ಸಭೆಯಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಪಾಲ್ಗೊಂಡಿದ್ದರು. ಜಯಪ್ರಕಾಶ್ ನಾರಾಯಣ್ ಚಳವಳಿಯಲ್ಲಿ ಭಾಗವಹಿಸಿದ್ದ ಈ ಇಬ್ಬರನ್ನೂ ತಾವು ವಿದ್ಯಾರ್ಥಿ ನಾಯಕರಾಗಿದ್ದಾಗ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಬಂಧಿಸಲಾಗಿತ್ತು. ಈ ಅವಧಿಯಲ್ಲಿ ಲಾಲು 22 ತಿಂಗಳು ಜೈಲುವಾಸ ಅನುಭವಿಸಿದ್ದರೆ, ನಿತೀಶ್ 20 ತಿಂಗಳು ಜೈಲಿನಲ್ಲಿದ್ದರು. ಇದನ್ನೇ ಉಲ್ಲೇಖಿಸಿ ನಡ್ಡಾ ಹೇಳಿಕೆ ನೀಡಿದ್ದಾರೆ.
ಒಡಿಶಾದ ಕಲಹಂಡಿ ಜಿಲ್ಲೆಯ ಭವಾನಿಪಟ್ಟಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ನಡ್ಡಾ, ಇಂದು ರಾಜಕೀಯದಲ್ಲಿ ವಿಚಿತ್ರವಾದ ಸಂಗತಿಗಳು ನಡೆಯುತ್ತಿವೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಂದ ಜೈಲು ಸೇರಿದ್ದ ನಾಯಕರು ಈಗ ಅವರ ಮೊಮ್ಮಗ ರಾಹುಲ್ ಗಾಂಧಿಯೊಂದಿಗೆ ಕೈಜೋಡಿಸಿದ್ದಾರೆ ಎಂದು ವ್ಯಂಗ್ಯವಾಡಿದರು.
ಮುಂದುವರೆದು, ಉದ್ಧವ್ ಠಾಕ್ರೆ ಪ್ರತಿಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಪಾಟ್ನಾ ತಲುಪಿದ್ದನ್ನು ನಾನು ನೋಡಿದೆ. ಅವರ ತಂದೆ ಹಿಂದೂ ಹೃದಯ ಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ಅವರು ಕಾಂಗ್ರೆಸ್ಅನ್ನು ಎಲ್ಲ ಕಾಲದಲ್ಲೂ ವಿರೋಧಿಸುತ್ತಿದ್ದರು. ಕಾಂಗ್ರೆಸ್ ಸೇರುವುದಕ್ಕಿಂತ ದುಕಾನ್ (ಶಿವಸೇನೆ) ಮುಚ್ಚುವುದೇ ಮೇಲು ಬಾಳಾಸಾಹೇಬ್ ಒಮ್ಮೆ ಹೇಳಿದ್ದರು. ಈಗ ಅವರ ಮಗನೇ 'ದುಕಾನ್' ಮುಚ್ಚಲು ಹೊರಟಿದ್ದಾರೆ ಎಂದು ನಡ್ಡಾ ಗೇಲಿ ಮಾಡಿದರು. ಕಾಂಗ್ರೆಸ್‌ಗೆ ವಿಶ್ವ ನಾಯಕರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳುತ್ತಿರುವದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದ ಅವರು, ಮೋದಿಯವರು ವಂಶ ರಾಜಕೀಯವನ್ನು ಬಲವಾಗಿ ವಿರೋಧಿಸುತ್ತಾರೆ. ದೇಶದಲ್ಲಿ ಅಭಿವೃದ್ಧಿಯ ರಾಜಕೀಯವನ್ನು ಅವರು ಪರಿಚಯಿಸಿದ್ದಾರೆ ಎಂದು ಹೇಳಿದರು.
ಪಾಟ್ನಾದಲ್ಲಿ ಫೋಟೋ ಸೆಷನ್ - ಶಾ ಟೀಕೆ: ಮತ್ತೊಂದೆಡೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ 2024ರಲ್ಲೂ 300ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಮತ್ತೊಮ್ಮೆ ಪ್ರಧಾನಿಯಾಗುವ ಮೂಲಕ ಸರ್ಕಾರ ರಚಿಸಲಿದ್ದಾರೆ. ಎಷ್ಟೇ ಪಕ್ಷಗಳು ಬಂದರೂ ಅವು ಎಂದಿಗೂ ಒಂದಾಗಲು ಸಾಧ್ಯವಿಲ್ಲ ಎಂದು ಹೇಳಿದರು.
ಜಮ್ಮುವಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಾಟ್ನಾದಲ್ಲಿ ಫೋಟೋ ಸೆಷನ್ ನಡೆಯುತ್ತಿದೆ. ಪ್ರತಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎಗೆ ಸವಾಲು ಹಾಕಲು ಬಯಸುತ್ತಾರೆ. 2024ರ ಲೋಕಸಭೆ ಚುನಾವಣೆಯಲ್ಲಿ 300 ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಪ್ರಧಾನಿ ಮೋದಿ ತಮ್ಮ ಸರ್ಕಾರವನ್ನು ರಚಿಸುತ್ತಾರೆ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ ಎಂದರು.