ಭೋಪಾಲ್(ಮಧ್ಯಪ್ರದೇಶ):ಸಚಿವರು ಸರ್ಕಾರಿ ಶಾಲೆಗೆ ಭೇಟಿ ನೀಡುತ್ತಾರೆ ಎಂಬ ವಿಚಾರ ತಿಳಿದರೆ ಅಲ್ಲಿನ ಸಿಬ್ಬಂದಿ ಮೊದಲೇ ಶಾಲೆಯ ಆವರಣವನ್ನು ಸ್ವಚ್ಛಗೊಳಿಸಿ ಸ್ವಾಗತಿಸುವುದನ್ನು ನೋಡಿದ್ದೇವೆ. ಆದ್ರೆ ಇಲ್ಲಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದ ಸಚಿವರೇ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಶೌಚಾಲಯ ಸ್ವಚ್ಛಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.
ಸರ್ಕಾರಿ ಶಾಲೆಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ ಇಂಧನ ಸಚಿವ! - ಇಂಧನ ಸಚಿವರಿಂದ ಶೌಚಾಲಯ ಸ್ವಚ್ಚ
Madhya Pradesh Energy minister cleans toilets: ದಿಢೀರ್ ಆಗಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದ ಇಂಧನ ಸಚಿವರು ಅಲ್ಲಿನ ವಿದ್ಯಾರ್ಥಿಗಳ ಸಮಸ್ಯೆ ಆಲಿಸುತ್ತಿದ್ದಂತೆ ಖುದ್ದಾಗಿ ಶೌಚಾಲಯ ಸ್ವಚ್ಛಗೊಳಿಸಿ ಗಮನ ಸೆಳೆದಿದ್ದಾರೆ.
ಮಧ್ಯಪ್ರದೇಶದ ಇಂಧನ ಖಾತೆ ಸಚಿವರಾಗಿರುವ ಪ್ರದ್ಯುಮ್ನ ಸಿಂಗ್ ತೋಮರ್ ಅವರು ಹಜಿರಾ ಗ್ವಾಲಿಯರ್ನಲ್ಲಿರುವ ಸರ್ಕಾರಿ ಶಾಲೆಗೆ ಭೇಟಿ ನೀಡಿದಾಗ ಶಾಲಾ ವಿದ್ಯಾರ್ಥಿಗಳು ಶೌಚಾಲಯದ ಸಮಸ್ಯೆ ಬಗ್ಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಪ್ರತಿದಿನ ಈ ಸಮಸ್ಯೆ ಎದುರಿಸುವಂತಾಗಿದೆ ಎಂದು ತಿಳಿಸಿದ್ದಾರೆ. ಈ ವೇಳೆ ಅಲ್ಲಿನ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಚಿವರು, ಖುದ್ದಾಗಿ ತಾವೇ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶೌಚಾಲಯ ಸ್ವಚ್ಛಗೊಳಿಸಿದ ಬಳಿಕ ಜಿಲ್ಲಾಧಿಕಾರಿಗೆ ಫೋನ್ ಮಾಡಿರುವ ಸಚಿವರು, ಸರ್ಕಾರಿ ಶಾಲೆಗಳಲ್ಲಿ ಸ್ವಚ್ಛತೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಕಾಣಿಸಿಕೊಳ್ಳದಂತೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಇದರ ಜೊತೆಗೆ ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾ ಶಿಕ್ಷಣಾಧಿಕಾರಿಗಳಿಗೂ ಕರೆ ಮಾಡಿ ಬಿಸಿ ಮುಟ್ಟಿಸಿದ್ದಾರೆ.