ಮುಂಬೈ(ಮಹಾರಾಷ್ಟ್ರ):ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾನು ಹಲ್ಲೆ ಮಾಡಬಲ್ಲೆ, ಅವರನ್ನು ನಿಂದಿಸಬಲ್ಲೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ವಿವಾದಿತ ಹೇಳಿಕೆ ನೀಡಿದ್ದಾರೆ. ರ್‍ಯಾಲಿವೊಂದರಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಅವರು ಈ ರೀತಿಯಾಗಿ ಮಾತನಾಡಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
ನಿನ್ನೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ಜಿಲ್ಲಾ ಪರಿಷತ್ ಮತ್ತು ಪಂಚಾಯಿತಿ ಸಮಿತಿ ಚುನಾವಣೆಗೂ ಮುನ್ನ ನಡೆದ ರ್‍ಯಾಲಿಯಲ್ಲಿ ಅವರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿರುವ ಪಟೋಲೆ, ಕಳೆದ 30 ವರ್ಷಗಳಿಂದ ನಾನು ರಾಜಕೀಯದಲ್ಲಿದ್ದೇನೆ. ನನ್ನ ಹೆಸರಿನಲ್ಲಿ ಒಂದೇ ಒಂದು ಶಾಲೆಯೂ ಸಹ ಇಲ್ಲ. ನಾನು ಎಲ್ಲರಿಗೂ ಸಹಾಯ ಮಾಡುತ್ತೇನೆ ಎಂದಿದ್ದಾರೆ.