ಮುಂಬೈ (ಮಹಾರಾಷ್ಟ್ರ): ಭಾನುವಾರ ನಡೆದ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನೆತ್ತಿ ಸುಡುವ ಬಿಸಿಲಿನ ತಾಪಕ್ಕೆ 14 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯಿಂದ ಎಚ್ಚೆತ್ತುಕೊಂಡಿರುವ ಮಹಾರಾಷ್ಟ್ರ ಸರ್ಕಾರ, ಬಿಸಿಲಿನ ತಾಪ ಕಡಿಮೆಯಾಗುವವರೆಗೆ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ರವರೆಗೆ ಹೊರಾಂಗಣ ಕಾರ್ಯಕ್ರಮಗಳನ್ನು ನಿಷೇಧಿಸಿ ಆದೇಶಿಸಿದೆ.
ಮಹಾರಾಷ್ಟ್ರ ಸರ್ಕಾರ ನಾಗರಿಕರ ಸಮಾಜ ಸೇವೆ ಪರಿಗಣಿಸಿ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿಯನ್ನು ನೀಡುತ್ತದೆ. ಅದರಂತೆ ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ್ ಯಾನೆ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಪ್ರಶಸ್ತಿ ಪ್ರದಾನ ಮಾಡಿದ್ದರು. ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಮಾರಂಭದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮ ನಡೆಯುವಾಗಲೇ ಸುಡುವ ಬಿಸಿಲಿನಿಂದಾಗಿ ದುರಂತ ನಡೆದಿತ್ತು.
ನವಿ ಮುಂಬೈನ ಬೃಹತ್ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಟೆಂಟ್ ಹಾಕದ ಕಾರಣ ಸಾವಿರಾರು ಜನ ಬಿಸಿಲಿನಲ್ಲಿಯೇ ಕುಳಿತು ಕಾರ್ಯಕ್ರಮ ವೀಕ್ಷಿಸಬೇಕಾಗಿತ್ತು. ಅದರಲ್ಲೂ, ದತ್ತಾತ್ರೇಯ ನಾರಾಯಣ್ ಅವರ ಸಾವಿರಾರು ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬೆಳಗ್ಗೆ 11.30ಕ್ಕೆ ಆರಂಭವಾದ ಕಾರ್ಯಕ್ರಮ ಮಧ್ಯಾಹ್ನ 1 ಗಂಟೆಯವರೆಗೂ ನಡೆದಿತ್ತು. ಹಾಗಾಗಿ 38 ಡಿಗ್ರಿ ಸೆಲ್ಸಿಯಸ್ ತಾಪಮಾನವು ಜನರನ್ನು ಬಸವಳಿಯುವಂತೆ ಮಾಡಿತ್ತು. ಆಯಾಸ ಹಾಗೂ ನಿರ್ಜಲೀಕರಣದಿಂದ ಜನ ಸಾವಿಗೀಡಾಗಿದ್ದರು ಎಂದು ವರದಿಯಾಗಿತ್ತು.