ನವದೆಹಲಿ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಶಿವಸೇನೆಯ ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಬಣಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿತು. ಶಿಂಧೆ ಬಂಡಾಯದ ನಂತರ ಉದ್ಧವ್ ಠಾಕ್ರೆ ನೇತೃತ್ವದ ಮೂರು ಪಕ್ಷಗಳ ಮಹಾ ವಿಕಾಸ್ ಆಘಾಡಿ (ಎಂವಿಎ) ನೇತೃತ್ವದ ಸರ್ಕಾರದ ಪತನಕ್ಕೆ ಕಾರಣವಾದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದ ಸಲ್ಲಿಸಲಾದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರಿದ್ದ ಪೀಠ ಇಂದು ವಿಚಾರಣೆ ನಡೆಸಿದೆ.
ಶಿವಸೇನೆಯಿಂದ ಬಂಡಾಯವೆದ್ದು ಬಿಜೆಪಿ ಸೇರಿದ್ದ ಏಕನಾಥ್ ಶಿಂಧೆ ಬಣದ 16 ಶಾಸಕರನ್ನು ಅನರ್ಹಗೊಳಿಸಬೇಕೆಂದು ಕೋರಿ ಶಿವಸೇನೆಯ ನಾಯಕ ಹಾಗೂ ಮಾಜಿ ಸಿಎಂ ಉದ್ಧವ್ ಠಾಕ್ರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ ಶಿಂಧೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿಂದೆ ಮಹಾರಾಷ್ಟದ ಸರ್ಕಾರದ ಬಿಕ್ಕಟ್ಟಿನ ಕುರಿತು ಸುಪ್ರೀಂ ಕೋರ್ಟ್ಗೆ ಹಲವು ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಪೀಠ ಮೇ 11 ಕ್ಕೆ ತೀರ್ಪು ಕಾಯ್ದಿರಿಸಿತ್ತು. ಶಾಸಕರ ಅರ್ಹತೆ ತೀರ್ಪನ್ನು ನ್ಯಾಯಾಲಯ ಎತ್ತಿ ಹಿಡಿದರೆ ಶಿಂಧೆ ಬಣದ ಶಿವಸೇನೆ ಮತ್ತು ಬಿಜೆಪಿ ಸರ್ಕಾರ ಪತನಗೊಳ್ಳಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು.
ಇದನ್ನೂ ಓದಿ:ಏಕನಾಥ್ ಶಿಂಧೆ ನೇತೃತ್ವದ ಬಣವೇ ನಿಜವಾದ ಶಿವಸೇನೆ: ಉದ್ಧವ್ ಕೈ ಜಾರಿದ ಬಿಲ್ಲು-ಬಾಣ
ಕಳೆದ ವರ್ಷ ಉಂಟಾದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಉಂಟಾಗಿತ್ತು. ಶಿವಸೇನೆ, ಕಾಂಗ್ರೆಸ್, ಎನ್ಸಿಪಿ ಮೈತ್ರಿಕೂಟದ ಮಹಾ ವಿಕಾಸ ಆಘಾಡಿ ಸರ್ಕಾರದ ವಿರುದ್ಧ ಶಿವಸೇನೆ ನಾಯಕ ಏಕನಾಥ್ ಶಿಂಧೆ ಬಂಡಾಯದ ಬಾವುಟ ಹಾರಿಸಿ, ಬಿಜೆಪಿಯೊಂದಿಗೆ ಕೈಜೋಡಿಸಿ ಸರ್ಕಾರ ರಚನೆ ಮಾಡಿದ್ದರು. ಇದರಿಂದ ಶಿವಸೇನೆ ಪಕ್ಷ ಇಬ್ಭಾಗಗೊಂಡು, 2022ರ ಜೂನ್ 29ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದರು.