ಮುಂಬೈ : ನಗರದಲ್ಲಿ ಕೋವಿಡ್ -19 ಪ್ರಕರಣಗಳು ಉಲ್ಬಣಗೊಳ್ಳುತ್ತಿದ್ದು, ಜನರು ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿದರೆ ಲಾಕ್ ಡೌನ್ ಮಾಡಲಾಗುವುದು ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೆಕರ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಘೋಷಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಗರದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಗೊಳ್ಳುತ್ತಿವೆ. ರೈಲುಗಳಲ್ಲಿ ಪ್ರಯಾಣಿಸುವ ಹೆಚ್ಚಿನ ಜನರು ಮಾಸ್ಕ್ ಧರಿಸುತ್ತಿಲ್ಲ. ಇದೊಂದು ಕಳವಳಕಾರಿ ಸಂಗತಿಯಾಗಿದೆ. ನಾವು ಮತ್ತೊಂದು ಲಾಕ್ ಡೌನ್ಗೆ ಹೋಗದಂತೆ ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.
ಕಳೆದ ಮೂರು ನಾಲ್ಕು ತಿಂಗಳಿನಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಇಳಿಕೆ ಕಂಡಿತ್ತು. ನಿತ್ಯ 2 ಸಾವಿರದಿಂದ 2,500 ರಷ್ಟು ಪ್ರಕರಣಗಳು ವರದಿಯಾಗ್ತಿತ್ತು. ಆದರೆ, ಇತ್ತೀಚೆಗೆ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹಲವು ದಿನಗಳ ನಂತರ ಫೆಬ್ರವರಿ 14 ರಂದು 4 ಸಾವಿರಕ್ಕಿಂತ ಹೊಸ ಪ್ರಕರಣಗಳು ವರದಿಯಾಗಿವೆ.
ಜನರು ಮಾಸ್ಕ್ ಧರಿಸದೇ ಓಡಾಡ್ತಿರುವುದೇ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಕಾರಣ ಎಂದು ಅನೇಕ ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು, ಅವರು ನಾಗರಿಕರಿಗೆ ಮನವಿ ಮಾಡಿದ್ದಾರೆ. ಅಲ್ಲದೇ, ಕೋವಿಡ್ ಪರೀಕ್ಷೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಕೋವಿಡ್ ಕಾರ್ಯಪಡೆ ಸಲಹೆ ನೀಡಿದೆ.