ನವದೆಹಲಿ:ಮುಂಬರುವ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಡುತ್ತಾರೆ ಎಂಬ ಭರವಸೆ ನಮಗಿದೆ ಎಂದು ಖರ್ಗೆ ತಿಳಿಸಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಹೈಕಮಾಂಡ್ ಕರೆದ ಸಭೆಯಲ್ಲಿ ರಾಜ್ಯದ ಹಲವು ನಾಯಕರು ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಜೈರಾಮ್ ರಮೇಶ್, ಸಚಿವರಾದ ಹೆಚ್ಕೆ ಪಾಟೀಲ್, ಎಂಬಿ ಪಾಟೀಲ್, ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಕೆಹೆಚ್ ಮುನಿಯಪ್ಪ, ಕೆಜೆ ಜಾರ್ಜ್ ಹಾಗೂ ಹಿರಿಯ ನಾಯಕರಾದ ವಿಆರ್ ದೇಶಪಾಂಡೆ, ಬಿಕೆ ಹರಿಪ್ರಸಾದ್, ರಮೇಶ ಕುಮಾರ್ ಸೇರಿ ಹಲವರು ಭಾಗವಹಿಸಿದ್ದರು. ವಿಶೇಷವಾಗಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸಹ ಸಭೆಯಲ್ಲಿ ಉಪಸ್ಥಿತರಿದ್ದರು.
ಈ ಸಭೆ ಕುರಿತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿ, ನಾವು ಒಟ್ಟಾಗಿ 6.5 ಕೋಟಿ ಕನ್ನಡಿಗರಿಗೆ ಪ್ರಗತಿ ಮತ್ತು ಕಲ್ಯಾಣದ ಹೊಸ ಅಧ್ಯಾಯವನ್ನು ಬರೆಯುತ್ತಿದ್ದೇವೆ. ನಮ್ಮ 5 ಪ್ರಮುಖ ಗ್ಯಾರೆಂಟಿ ಯೋಜನೆಗಳನ್ನು ಪೂರೈಸಲು ನಾವು ದಣಿವಿಲ್ಲದೆ ಕೆಲಸ ಮಾಡುತ್ತಿದ್ದೇವೆ. ಇವೆಲ್ಲವೂ ಅನುಷ್ಠಾನದ ಮುಂದುವರಿದ ಹಂತಗಳಲ್ಲಿವೆ ಎಂದು ತಿಳಿಸಿದ್ದಾರೆ.