ಕೋಲ್ಕತ್ತಾ (ಪಶ್ಚಿಮ ಬಂಗಾಳ):ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಭಾಗಿಯಾಗುತ್ತಿಲ್ಲ. ಬದಲಿಗೆ ಮಮತಾ ಅವರ ಪ್ರತಿನಿಧಿಯಾಗಿ ಪಕ್ಷದ ನಾಯಕ ಕಾಕೋಲಿ ಘೋಷ್ ದಸ್ತಿದಾರ್ ಪಾಲ್ಗೊಳ್ಳಲಿದ್ದಾರೆ.
ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆ ಬಹುಮತ ಪಡೆದಿರುವ ಕಾಂಗ್ರೆಸ್ ಶನಿವಾರ ತನ್ನ ಸರ್ಕಾರ ರಚಿಸಲಿದೆ. ನೂತನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಹಲವು ಸಚಿವರು ಪದಗ್ರಹಣ ಮಾಡಲಿದ್ದಾರೆ. ಬಿಜೆಪಿ ಆಡಳಿತೇತರ ಪ್ರಮುಖ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಾರೆ ಎಂದು ಹೇಳಲಾಗಿತ್ತು. ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನ ನೀಡಿದ್ದರು. ಆದರೆ, ಮಮತಾ ಸಮಾರಂಭಕ್ಕೆ ಗೈರಾಗಲಿದ್ದಾರೆ.
ರಾಜ್ಯಸಭಾ ಸದಸ್ಯ, ಟಿಎಂಸಿ ನಾಯಕ ಡೆರೆಕ್ ಓಬ್ರಿಯಾನ್ ಟ್ವೀಟ್ ಮಾಡಿದ್ದು, ಕರ್ನಾಟಕದ ನಿಯೋಜಿತ ಸಿಎಂ ಸಿದ್ದರಾಮಯ್ಯ ಮತ್ತು ಅವರ ಇತರ ಸಹೋದ್ಯೋಗಿಗಳ ನಾಳೆ ಪ್ರಮಾಣ ವಚನ ಸ್ವೀಕಾರಕ್ಕೆ ಟಿಎಂಸಿ ಅಧ್ಯಕ್ಷೆ ಮತ್ತು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ವೈಯಕ್ತಿಕವಾಗಿ ಆಹ್ವಾನ ನೀಡಲಾಗಿದೆ. ನಿಯೋಜಿತ ಸಿಎಂ ಅವರಿಗೆ ಮಮತಾ ತಮ್ಮ ಶುಭಾಶಯ ತಿಳಿಸಿದ್ದಾರೆ. ಈ ಸಮಾರಂಭದಲ್ಲಿ ಭಾಗವಹಿಸಲು ಲೋಕಸಭೆಯಲ್ಲಿ ಟಿಎಂಸಿ ಪಕ್ಷದ ಉಪ ನಾಯಕರಾದ ಕಾಕೋಲಿ ಘೋಷ್ ದಸ್ತಿದಾರ್ ಅವರನ್ನು ನೇಮಿಸಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.