ನವದೆಹಲಿ: ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಗಳು ಇತ್ತೀಚೆಗೆ ಭಾರಿ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇಂಥ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.
ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಬೇಕು ಎಂದು ಹೇಳಿರುವುದಲ್ಲದೇ, ಅಂತಹ ವ್ಯಕ್ತಿಗಳ ವಿರುದ್ಧ ಸಾಂಕ್ರಾಮಿಕ ರೋಗಗಳ (ತಿದ್ದುಪಡಿ) ಕಾಯ್ದೆ- 2020ರ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಿ ಎಂದು ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಭಲ್ಲಾ ತಿಳಿಸಿದ್ದಾರೆ.
ಹಲ್ಲೆ ಮಾಡುವವರು ಮಾತ್ರವಲ್ಲದೇ ಆಕ್ಷೇಪಾರ್ಹ ವಿಚಾರಗಳನ್ನು ಹರಡುವ ಸಾಮಾಜಿಕ ಮಾಧ್ಯಮಗಳ ಮೇಲೆಯೂ ನಿಗಾ ಇಡುವಂತೆ ಸೂಚನೆ ನೀಡಲಾಗಿದೆ. ಆಸ್ಪತ್ರೆಗಳು ಮತ್ತು ಆರೋಗ್ಯ ಸಿಬ್ಬಂದಿ ವಿರುದ್ಧ ಹರಡುವ ಸಾಕ್ಷ್ಯ ರಹಿತ, ಸುಳ್ಳು ಸುದ್ದಿ ಹರಡುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂದು ಅಜಯ್ ಭಲ್ಲಾ ಸೂಚಿಸಿದ್ದಾರೆ.