ಬಾರಾಮುಲ್ಲಾ( ಜಮ್ಮು ಮತ್ತು ಕಾಶ್ಮೀರ): ಲಷ್ಕರ್ ಎ ತೋಯ್ಬಾ ಉಗ್ರ ಸಂಘಟನೆಯ ಸಹಚರನನ್ನು ಶಸ್ತ್ರಾಸ್ತ್ರಗಳೊಂದಿಗೆ ಸೆರೆ ಹಿಡಿಯಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತನನ್ನು ನೌಪೋರಾ ಜಾಗೀರ್ ಕ್ರೀರ್ ಗ್ರಾಮದ ನಿವಾಸಿ ಮೊಹಮ್ಮದ್ ಸಿದ್ದಿಕ್ ಎಂದು ಗುರುತಿಸಲಾಗಿದೆ. ಬಂಧಿತನ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇಲ್ಲಿನ ನೌಪೋರಾ ಜಾಗೀರ್ ಕ್ರೀರ್ ಗ್ರಾಮದಲ್ಲಿ ಉಗ್ರರ ಚಲವಲನ ಇರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ಗ್ರಾಮದಲ್ಲಿ ಜಂಟಿ ಕಾರ್ಯಾಚರಣೆ ಹಮ್ಮಿಕೊಂಡಿದ್ದರು. ಈ ವೇಳೆ ಉಗ್ರ ಸಂಘಟನೆಯ ಸಹಚರನೊಬ್ಬ ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮತ್ತು ಸೇನಾಪಡೆ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಒಂದು ಪಿಸ್ತೂಲ್ ಮತ್ತು ಮೂರು ಜೀವಂತ ಮದ್ದು ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಯು ಲಷ್ಕರ್ ಎ ತೋಯ್ಬಾ ಉಗ್ರ ಸಂಘಟನೆಯ ಸಹವರ್ತಿಯಾಗಿ ಕೆಲಸ ಮಾಡುತ್ತಿದ್ದನು. ಆರೋಪಿಯು ಸೋಪೋರ್ನ ಉಗ್ರಗಾಮಿ ಆದಿಲ್ ದಾಂಟೂ ಮತ್ತು ಪಾಕಿಸ್ತಾನದ ಉಗ್ರಗಾಮಿ ಉಸ್ಮಾನ್ ಭಾಯ್ಗಾಗಿ ಕೆಲಸ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ. ಜಿಲ್ಲೆಯಲ್ಲಿ ಉಗ್ರ ಕೃತ್ಯಗಳನ್ನು ಎಸಗಲು ಶಸ್ತ್ರಾಸ್ತ್ರಗಳನ್ನು ಪಡೆದುಕೊಂಡಿರುವುದಾಗಿ ವಿಚಾರಣೆ ವೇಳೆ ಆರೋಪಿ ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.