ಲಖನೌ(ಉತ್ತರ ಪ್ರದೇಶ):ಉತ್ತರ ಪ್ರದೇಶದಲ್ಲಿ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿರುವ ಯೋಗಿ ಆದಿತ್ಯನಾಥ್ ಒಂದಿಲ್ಲೊಂದು ವಿಶೇಷ ಯೋಜನೆ ಜಾರಿಗೆ ತರುವ ಮೂಲಕ ಹೆಚ್ಚು ಗಮನ ಸೆಳೆಯುತ್ತಿದ್ದಾರೆ. ಇದೀಗ ಅಧಿಕಾರಿಗಳು ಹಾಗೂ ಸಚಿವರಿಗೆ ಬಿಸಿ ಮುಟ್ಟಿಸಿದ್ದು, ಮುಂದಿನ ಮೂರು ತಿಂಗಳೊಳಗೆ ತಮ್ಮ ಆಸ್ತಿ ಘೋಷಣೆ ಮಾಡುವಂತೆ ಆದೇಶಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಚಿವ ಸಂಪುಟದಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ಸಚಿವರು, ಸರ್ಕಾರಿ ಅಧಿಕಾರಿಗಳು ತಾವು ಪ್ರಮಾಣವಚನ ಸ್ವೀಕಾರ ಮಾಡಿದ ಅಥವಾ ಅಧಿಕಾರದ ಚುಕ್ಕಾಣಿ ಹಿಡಿದ ಮೂರು ತಿಂಗಳೊಳಗೆ ತಮ್ಮ ಆಸ್ತಿ ಘೋಷಣೆ ಮಾಡಬೇಕು ಎಂದು ಸೂಚಿಸಿದ್ದಾರೆ. ಸಚಿವರೊಂದಿಗೆ ಇಂದು ನಡೆದ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಾರ್ವಜನಿಕ ಪ್ರತಿನಿಧಿಗಳ ಪಾವಿತ್ರ್ಯತೆ ಕಾಪಾಡುವುದು ಅತಿ ಅವಶ್ಯಕ ಎಂದು ತಿಳಿಸಿದ್ದಾರೆ.
ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಮಹತ್ವದ ಸಭೆ ಇದನ್ನೂ ಓದಿ:ಮಹಿಳಾಧಿಕಾರಿ ಮೇಲೆ ಹೋಟೆಲ್ ಮಾಲೀಕನಿಂದ ಅತ್ಯಾಚಾರ, ಚಿತ್ರಹಿಂಸೆ
ಐಎಎಸ್ ಅಧಿಕಾರಿಗಳು ತಮ್ಮ ಮತ್ತು ತಮ್ಮ ಕುಟುಂಬದ ಸದಸ್ಯರ ಎಲ್ಲ ಚರ/ಸ್ಥಿರಾಸ್ತಿಯನ್ನು ಸಾರ್ವಜನಿಕವಾಗಿ ಘೋಷಿಸಬೇಕು. ಇದರ ಜೊತೆಗೆ, ಆನ್ಲೈನ್ ಪೋರ್ಟಲ್ನಲ್ಲಿ ಲಭ್ಯವಾಗುವಂತೆ ಮಾಡಬೇಕು ಎಂದಿದ್ದಾರೆ. ಸಚಿವರ ಆಡಳಿತದಲ್ಲಿ ಕುಟುಂಬದ ಹಸ್ತಕ್ಷೇಪವಿಲ್ಲದಂತೆ ನೋಡಿಕೊಳ್ಳಬೇಕು. ನಮ್ಮ ನಡವಳಿಕೆ ಎಲ್ಲರಿಗೂ ಮಾದರಿಯಾಗಬೇಕು. ಯೋಜನೆಗಳು ಕಾರ್ಯರೂಪಕ್ಕೆ ತರುವ ಸಮಯ ಇದಾಗಿದ್ದು, ಎಲ್ಲ ಸಚಿವರು ಇಲಾಖಾ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದ್ದು, ಕಳೆದ ಕೆಲ ದಿನಗಳ ಹಿಂದೆ ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಯಾವುದೇ ರೀತಿಯ ಧಾರ್ಮಿಕ ಮೆರವಣಿಗೆ ನಡೆಸುವಂತಿಲ್ಲ ಎಂಬ ನಿರ್ಧಾರ ಹೊರಹಾಕಿದ್ದರು.