ನವದೆಹಲಿ:ನಿನ್ನೆ ರಾತ್ರಿ ಬಾಲಸೋರ್ನಲ್ಲಿ ಸಂಭವಿಸಿದ ರೈಲು ಅಪಘಾತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ರೈಲ್ವೇ ಸಚಿವರು ಬೆಳಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಕೂಡ ಇಂದು ದುರಂತ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಇನ್ನು ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದರು. ಅಪಘಾತ ಮತ್ತು ನಂತರದ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಲಾಗುತ್ತಿದೆ. ಈ ಪರಿಶೀಲನಾ ಸಭೆಯಲ್ಲಿ ವಿವಿಧ ಸಚಿವಾಲಯಗಳ ಸಚಿವರು ಸೇರಿದಂತೆ ರೈಲ್ವೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಈ ಪರಿಶೀಲನಾ ಸಭೆ ಮುಂದುವರಿದಿದೆ ಎಂದು ವರದಿಯಾಗಿದೆ. ಸಭೆಯ ನಂತರ ಕೇಂದ್ರ ಸರ್ಕಾರ ದೊಡ್ಡ ಘೋಷಣೆ ಮಾಡಬಹುದು.
ನಿನ್ನೆ ಸಂಜೆ 7 ಗಂಟೆಗೆ ಶಾಲಿಮಾರ್ - ಹೌರಾ ಕೋರಮಂಡಲ್ ಎಕ್ಸ್‌ಪ್ರೆಸ್ ಬಹನಾಗಾ ನಿಲ್ದಾಣದಲ್ಲಿ ಹಳಿ ತಪ್ಪಿ ನಂತರ ಪಲ್ಟಿಯಾಗಿದೆ. ಕೆಲವು ನಿಮಿಷಗಳ ನಂತರ, ಬೆಂಗಳೂರು - ಹೌರಾ ಸೂಪರ್‌ಫಾಸ್ಟ್ ರೈಲು ಕೂಡ ಅದೇ ಸ್ಥಳದಲ್ಲಿ ಹಳಿತಪ್ಪಿತು. ಅಪಘಾತದಲ್ಲಿ ಸತ್ತವರ ಸಂಖ್ಯೆ 238ಕ್ಕೆ ಏರಿಕೆಯಾಗಿದೆ. ಅಷ್ಟೇ ಅಲ್ಲ ಸಾವಿರಾರೂ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಒಡಿಶಾದ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ, ಸಾವು - ನೋವುಗಳ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಹೇಳಿದ್ದಾರೆ. ಅಪಘಾತ ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯ ನಡೆಯುತ್ತಿದೆ. ರಕ್ಷಣಾ ಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಒಡಿಶಾ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ಒಡಿಶಾ ಮತ್ತು ಪಶ್ಚಿಮ ಬಂಗಾಳದ ರಕ್ಷಣಾ ತಂಡಗಳು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಇಂದು ಒಂದು ದಿನದ ಶೋಕಾಚರಣೆ ಘೋಷಿಸಿದ್ದಾರೆ.