ಭೋಪಾಲ್ (ಮಧ್ಯಪ್ರದೇಶ) :ಮಧ್ಯಪ್ರದೇಶದ ನೂತನ ಸಿಎಂ ಆಗಿ ಆಯ್ಕೆಯಾಗಿರುವ ಮೋಹನ್ ಯಾದವ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಭೋಪಾಲ್‌ನ ಮೋತಿಲಾಲ್ ನೆಹರು ಕ್ರೀಡಾಂಗಣದಲ್ಲಿ ರಾಜ್ಯಪಾಲ ಮಂಗುಭಾಯ್ ಸಿ.ಪಟೇಲ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಇದರ ಜೊತೆಗೆ ಉಪ ಮುಖ್ಯಮಂತ್ರಿಗಳಾಗಿ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದೇವ್ರಾ ಅವರು ಕೂಡ ಪ್ರತಿಜ್ಞೆ ಪಡೆದರು. ಕೇಂದ್ರದ ಮಾಜಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ವಿಧಾನಸಭೆ ಸ್ಪೀಕರ್ ಆಗಲಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಾಜಿ ಸಿಎಂ ಶಿವರಾಜ್ ಸಿಂಗ್ ಔಹಾಣ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ದೇವಸ್ಥಾನವೊಂದರಲ್ಲಿ ಪೂಜೆ ಸಲ್ಲಿಸಿದರು. ಬಳಿಕ ರಾಜ್ಯ ಬಿಜೆಪಿ ಕಚೇರಿಗೂ ಭೇಟಿ ನೀಡಿದರು. ಅಲ್ಲಿ ಅವರು ಜನಸಂಘದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಮತ್ತು ಕೇಸರಿ ಪಕ್ಷದ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ನಮನ ಸಲ್ಲಿಸಿದರು.
ಯಾದವ ಸಮುದಾಯದ ನಾಯಕರಾದ ಸಿಎಂ ಮೋಹನ್ ಯಾದವ್ ಅವರ ಶಪಥ ಕಾರ್ಯಕ್ರಮಕ್ಕೆ ಉಜ್ಜಯಿನಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ರಾಜ್ಯದಲ್ಲಿ ಯಾದವರ ಸಂಖ್ಯೆ ಅಧಿಕವಾಗಿದ್ದರಿಂದ ಅದೇ ಸಮುದಾಯದ ನಾಯಕನಿಗೆ ಪಕ್ಷ ಮಣೆ ಹಾಕಿದೆ.