ಮುಂಬೈ( ಮಹಾರಾಷ್ಟ್ರ): ಬಹು ಅಂಗಾಂಗ ವೈಫಲ್ಯದಿಂದ ಇಂದು ಮುಂಜಾನೆ ನಿಧನರಾದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರವನ್ನು ಪೆದ್ದಾರ್ ರಸ್ತೆಯಲ್ಲಿರುವ ಅವರ ನಿವಾಸ ಪ್ರಭುಕುಂಜ್ಗೆ ತರಲಾಗಿದೆ. ಇಂದು ಸಂಜೆ ಅಂತಿಮ ಸಂಸ್ಕಾರ ನೆರವೇರಲಿದೆ.
ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ಇಂದು ಸಂಜೆ 6:30ಕ್ಕೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದ್ದು, ಎಲ್ಲಾ ರೀತಿಯ ಸಿದ್ಧತೆಗಳು ನಡೆಯುತ್ತಿವೆ.
ಜನವರಿ. 9ರಂದು ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಲತಾ ಮಂಗೇಶ್ಕರ್ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೋವಿಡ್ ಸೋಂಕು ಮತ್ತು ನ್ಯುಮೋನಿಯಾದಿಂದ ಸಂಪೂರ್ಣವಾಗಿ ಚೇತರಿಸಿಕೊಂಡ ಕಾರಣ ಹಾಗೂ ಅವರ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಕಳೆದ ವಾರ ಅವರಿಗೆ ಅಳವಡಿಸಿದ್ದ ವೆಂಟಿಲೇಟರ್ ಅನ್ನು ತೆಗೆದುಹಾಕಲಾಗಿತ್ತು. ಆದರೆ ನಿನ್ನೆಯಿಂದ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಪುನಃ ಅವರನ್ನು ವೆಂಟಿಲೇಟರ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಕೊನೆಯುಸಿರೆಳೆದಿದ್ದರು.