ಭೋಪಾಲ್ (ಮಧ್ಯಪ್ರದೇಶ):450 ರೂಪಾಯಿಗೆ ಸಿಲಿಂಡರ್ ಗ್ಯಾಸ್, ಬಡ ಹೆಣ್ಣು ಮಕ್ಕಳಿಗೆ ಸ್ನಾತಕೋತ್ತರ ಪದವಿಯವರೆಗೆ ಉಚಿತ ಶಿಕ್ಷಣ, ಗೋಧಿ, ಅಕ್ಕಿ ಎಂಎಸ್ಪಿ ದರದಲ್ಲಿ ಖರೀದಿ.. ಇಂದು ಮಧ್ಯಪ್ರದೇಶದಲ್ಲಿ ಬಿಜೆಪಿ ಬಿಡುಗಡೆ ಮಾಡಿದ ಪ್ರಣಾಳಿಕೆಯ ಪ್ರಮುಖ ಭರವಸೆಗಳು.
ನವೆಂಬರ್ 17 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಶನಿವಾರ ತನ್ನ ಭರವಸೆಗಳನ್ನು ಅನಾವರಣಗೊಳಿಸಿತು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಲ್ಲಿ ಉಜ್ವಲ ಯೋಜನೆಯ ಅಡಿ 450 ರೂಪಾಯಿಗೆ ಅಡುಗೆ ಅನಿಲ ಸಿಲಿಂಡರ್, ಲಾಡ್ಲಿ ಬಹನಾ ಯೋಜನೆಯಡಿ ಬಡ ಕುಟುಂಬದ ಹೆಣ್ಣುಮಕ್ಕಳಿಗೆ ಸ್ನಾತಕೋತ್ತರ ಪದವಿಯವರೆಗೆ ಉಚಿತ ಶಿಕ್ಷಣವನ್ನು ನೀಡುವುದಾಗಿ ಘೋಷಿಸಿತು.
ವೈದ್ಯಕೀಯ ಕಾಲೇಜು ಸ್ಥಾಪನೆ:ಪ್ರತಿ ಕ್ವಿಂಟಲ್ ಗೋಧಿಗೆ 2,700, ಮತ್ತು ಭತ್ತಕ್ಕೆ 3,100 ರೂ. ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ)ಯಲ್ಲಿ ಖರೀದಿ. ಪ್ರತಿ ಪರಿಶಿಷ್ಟ ಪಂಗಡದ (ಎಸ್‌ಟಿ) ಬ್ಲಾಕ್‌ಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವುದರೊಂದಿಗೆ ಏಕಲವ್ಯ ವಿದ್ಯಾಲಯಗಳನ್ನು ಸ್ಥಾಪಿಸುವುದಾಗಿ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ.
ಇದಲ್ಲದೆ, ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ 12 ನೇ ತರಗತಿಯವರೆಗೆ ಉಚಿತ ಶಿಕ್ಷಣವನ್ನು ಒದಗಿಸಲಾಗುವುದು. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮತ್ತು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ (ಏಮ್ಸ್) ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲಾಗುವುದು. ಜೊತೆಗೆ ವಸತಿ ರಹಿತರಿಗಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮಾದರಿಯಲ್ಲಿ ಮುಖ್ಯಮಂತ್ರಿ ಜನ್ ಆವಾಸ್ ಯೋಜನೆ (ವಸತಿ ಯೋಜನೆ) ಪ್ರಾರಂಭಿಸಲಾಗುವುದು ಎಂದು ಆಶ್ವಾಸನೆ ನೀಡಿತು.