ನವದೆಹಲಿ: ಚೀನಾ, ಜಪಾನ್ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಮತ್ತೆ ಕೊರೊನಾ ಉಲ್ಬಣಿಸಿದೆ. ಕಳೆದ 24 ಗಂಟೆಗಳಲ್ಲಿ ವಿಶ್ವದಾದ್ಯಂತ 1300ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಪರಿಣಾಮ ದೇಶದಲ್ಲಿ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳು ಮತ್ತು ಪ್ರಸ್ತುತ ರಾಷ್ಟ್ರದಲ್ಲಿ ಕೊರೊನಾ ಸ್ಥಿತಿಗತಿ ಕುರಿತು ಪರಿಶೀಲಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದಾರೆ. ಇದಕ್ಕೂ ಮೊದಲು ಕೊರೊನಾ ಮುನ್ನೆಚ್ಚರಿಕೆ ಕ್ರಮ ವಹಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದು ಸೂಚಿಸಿತ್ತು. ಹೀಗಾಗಿ ಆಯಾ ರಾಜ್ಯಗಳಲ್ಲಿ ಕೊರೊನಾ ತುರ್ತು ಸಭೆ ಕರೆಯಲಾಗಿದೆ.
ಇಂದು ಕೊರೊನಾ ತುರ್ತು ಸಭೆ ಕರೆದ ದೆಹಲಿ ಸಿಎಂ: ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹಠಾತ್ ಹೆಚ್ಚುತ್ತಿರುವ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ತುರ್ತು ಸಭೆ ಕರೆದಿದ್ದಾರೆ. ಅಲ್ಲದೇ ಅಧಿಕಾರಿಗಳಿಗೆ ಮಾಹಿತಿ ನೀಡಲಿದ್ದಾರೆ. ದೆಹಲಿ ಸರ್ಕಾರವು ಈಗಾಗಲೇ ಕೋವಿಡ್-19 ಪರಿಸ್ಥಿತಿಯ ಬಗ್ಗೆ ಮೇಲ್ವಿಚಾರಣೆ ಮಾಡುತ್ತಿದೆ. ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಉತ್ತರಾಖಂಡದಲ್ಲಿ ಶೀಘ್ರವೇ ಮಾರ್ಗಸೂಚಿ ಜಾರಿ: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಉತ್ತರಾಖಂಡದಲ್ಲಿ ಶೀಘ್ರವೇ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಧನ್ಸಿಂಗ್ ರಾವತ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ನಿರೀಕ್ಷಿಸಲಾಗಿದೆ. ಅಲ್ಲದೇ ನಾವು ಈಗಾಗಲೇ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದೇವೆ. ರಾಜ್ಯದಲ್ಲಿ ಕೊರೊನಾ ಸಮಸ್ಯೆಗಳು ಕಂಡುಬಂದಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಅನುಸರಿಸಲಾಗುವುದು ಎಂದಿದ್ದಾರೆ.