ಭುವನೇಶ್ವರ(ಒಡಿಶಾ): ದೆಹಲಿಯಿಂದ ಹೊರಟಿದ್ದ ಇಂಡಿಗೋ ವಿಮಾನವು ತಾಂತ್ರಿಕ ದೋಷದಿಂದಾಗಿ ತುರ್ತು ಭೂ ಸ್ಪರ್ಶ ಮಾಡಿದೆ ಎಂದು ವಿಮಾನಯಾನ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿನ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ 40 ನಿಮಿಷಗಳ ನಂತರ ಒಡಿಶಾದ ಭುವನೇಶ್ವರ ವಿಮಾನದಲ್ಲಿ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಬಿಪಿಐಎ ನಿರ್ದೇಶಕ ಪ್ರಸನ್ನ ಪ್ರಧಾನ್, ದೆಹಲಿಯಿಂದ ಹೊರಟಿದ್ದ ಇಂಡಿಗೋ ವಿಮಾನವನ್ನು ಇಂದು ಬೆಳಗ್ಗೆ 8.20ಕ್ಕೆ ತುರ್ತು ಭೂ ಸ್ಪರ್ಶ ಮಾಡಿಸಲಾಗಿದೆ. ಈ ವೇಳೆ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕೂಡಲೇ ತುರ್ತುಪರಿಸ್ಥಿತಿ ಘೋಷಿಸಲಾಯಿತು. ತಕ್ಷಣ ವಿಮಾನ ತುರ್ತು ಲ್ಯಾಂಡಿಂಗ್ ಮಾಡಲಾಯಿತು. ಹಕ್ಕಿಯೊಂದು ವಿಮಾನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಂತ್ರಿಕ ಸಮಸ್ಯೆ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ನಾಗರೀಕ ವಿಮಾನಯಾನ ಮಹಾನಿರ್ದೇಶನಾಲಯದಿಂದ ಅನುಮತಿ ಪಡೆದ ನಂತರ ವಿಮಾನ ಮತ್ತೆ ಹಾರಾಟ ನಡೆಸಿದೆ ಎಂದು ಮಾಹಿತಿ ನೀಡಿದ್ದಾರೆ.
ಇತ್ತೀಚಿನ ಘಟನೆಗಳು..ನಾಗ್ಪುರದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ :ಮುಂಬೈನಿಂದ ಹೊರಟಿದ್ದ ಇಂಡಿಗೋ ವಿಮಾನ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ್ದ ಘಟನೆ ಕಳೆದ ಆಗಸ್ಟ್ ತಿಂಗಳಲ್ಲಿ ನಡೆದಿತ್ತು. ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರ ಆರೋಗ್ಯ ಹಠಾತ್ ಹದಗೆಟ್ಟ ಹಿನ್ನೆಲೆ ತುರ್ತು ಲ್ಯಾಂಡಿಂಗ್ ಮಾಡಲಾಗಿತ್ತು.