ಹಮೀರ್ಪುರ(ಉತ್ತರ ಪ್ರದೇಶ):ಉತ್ತರ ಪ್ರದೇಶದ ಹಮೀರ್ಪುರದಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ಮಾದರಿಯ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅರಣ್ಯ ಪ್ರದೇಶಕ್ಕೆ ತೆರಳಿದ್ದ ವಿದ್ಯಾರ್ಥಿನಿಯ ಮೇಲೆ ಆರು ಮಂದಿ ಕಾಮುಕರು ಅತ್ಯಾಚಾರವೆಸಗಿದ್ದಾರೆ. ಅಷ್ಟೇ ಅಲ್ಲ, ಆಕೆಯನ್ನು ಬೆತ್ತಲೆ ಮಾಡಿ ಥಳಿಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಮೂಡಿಸಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಆರು ಮಂದಿ ಒಟ್ಟಿಗೆ ಸೇರಿ ವಿದ್ಯಾರ್ಥಿನಿಯೋರ್ವಳನ್ನು ಬೆತ್ತಲೆ ಮಾಡಿದ್ದು, ಆಕೆಯ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ್ದಾರೆ. ಜೊತೆಗೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆಂದು ಹೇಳಲಾಗ್ತಿದೆ. ಹಮೀರ್ಪುರ್ ಸಿಟಿ ಫಾರೆಸ್ಟ್ ಪ್ರದೇಶದಲ್ಲಿ ಘಟನೆ ನಡೆದಿದೆ. ದುಷ್ಕರ್ಮಿಗಳು ಕೈಯಲ್ಲಿ ಬೆಲ್ಟ್ ಹಾಗೂ ದೊಣ್ಣೆ ಹಿಡಿದು, ಯುವತಿ ಮೇಲೆ ಹಲ್ಲೆ ನಡೆಸಿದ್ದಾರೆ. ಇದೊಂದು ಸಾಮೂಹಿಕ ಅತ್ಯಾಚಾರದಂತಹ ಘೋರ ಅಪರಾಧ ಎಂದು ಹೇಳಲಾಗ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಮೀರ್ಪುರ ಪೊಲೀಸ್ ವರಿಷ್ಠಾಧಿಕಾರಿ ರವಿ ಪ್ರಕಾಶ್ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.